ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ- ಆರೋಪಿಯ ಮನೆಗೆ ಬೆಂಕಿ
ಇಂಫಾಲ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಘಟನೆ ಮೇ 4ರಂದು ನಡೆದಿದೆ ಎನ್ನಲಾಗಿದ್ದು ಇದೀಗ ಇದರ ವಿಡಿಯೋ ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಮಣಿಪುರದಲ್ಲಿ ಸಂಚಲನವನ್ನೇ ಸೃಷ್ಟಿ ಮಾಡಿತ್ತು ಅಲ್ಲದೆ ಈ ಘಟನೆಗೆ ಸಂಬಂಧಿಸಿ ಗುರುವಾರ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು.
ಈ ನಡುವೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಎನ್ನಲಾಗಿದೆ.
ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಆದರೆ, ಬುಧವಾರವಷ್ಟೇ ಈ ಭಯಾನಕ ದೃಶ್ಯಾವಳಿಗಳು ಹೊರಬಂದು ಇಂಟರ್ನೆಟ್ ನಿಷೇಧವನ್ನು ತೆಗೆದುಹಾಕಿದ ನಂತರ ವೈರಲ್ ಆಗಿದೆ. ಇದು ವೈರಲ್ ಆದ ಕೂಡಲೇ ಈ ವಿಡಿಯೋ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ವಯಂಪ್ರೇರಿತವಾಗಿ ದೂರು ದಾಖಲು ಮಾಡಿಕೊಂಡ ಮಣಿಪುರ ಪೊಲೀಸರು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಸಿಎಂ ಬಿರೇನ್ ಸಿಂಗ್ ಮಾತನಾಡಿದ್ದು, ಪೊಲೀಸರು ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿ ಕೊಂಡಿದ್ದಾರೆ. ಈ ನಡುವೆ ತಂಗ್ಬೋಯಿ ವೈಫೇಯ್ ಮೇ.18 ರಂದು ಕಾಂಗ್ಪೋಪಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್ ಹಾಗೂ ಜೂ.21 ರಂದು ತೌಬಲ್ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ನ್ನು ದಾಖಲಿಸಿದ್ದರು ಎಂದು ಹೇಳಿದ್ದಾರೆ.