ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತವಾದದ್ದು ಬಿಜೆಪಿ ಸರಕಾರದ ಅವಧಿಯಲ್ಲಿ – ಸಿಎಂ ತಿರುಗೇಟು
ಬೆಂಗಳೂರು, ಆ.1: ಕರ್ನಾಟಕದ ಕೆಎಂಎಫ್‌ನಿಂದ ತಿರುಪತಿಗೆ ಸರಬರಾಜು ಮಾಡುತ್ತಿದ್ದ ನಂದಿನಿ ತುಪ್ಪವನ್ನ ಸ್ಥಗಿತಗೊಳಿಸಿದ ವಿಚಾರ ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಗುದ್ದಾಟಕ್ಕೆ ಕಾರಣವಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ’ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರಕಾರದ ಅವಧಿಯಲ್ಲಿ ಸ್ಥಗಿತವಾಗಿದೆ” ಎಂದು ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ.
ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತವನ್ನು ಖಂಡಿಸಿ ಸಂಸದ ನಳೀನ್ ಕುಮಾರ್ ಟ್ಚೀಟ್ ಮಾಡಿದ್ದರು. ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ. ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ ಅವರ ತಾತ್ಸಾರ ನೀತಿ ರುಜುವಾತಾಗಿದೆ ಎಂದು ಸರಕಾರವನ್ನು ಟೀಕಿಸಿದ್ದಾರೆ.
ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ಚೀಟ್ ಮೂಲಕ ನಳೀನ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮಾನ್ಯ ಸಂಸದ ನಳೀನ್ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜು ಬೊಮ್ಮಯಿ ಅವರು ಮಾತ್ರ ಹಿಂದೂ ವಿರೋಧಿಯೋ’ ಎಂದು ಪ್ರಶ್ನಿಸಿದ್ದಾರೆ. ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.