ಚುನಾವಣೆಗೂ ಮುನ್ನ ವರುಣಾದಲ್ಲಿ ಕುಕ್ಕರ್, ಇಸ್ತ್ರಿಪೆಟ್ಟಿಗೆ ವಿತರಣೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆ ಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಂಜನಗೂಡಿನಲ್ಲಿ ಶುಕ್ರವಾರ ನಡೆದ ‌ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ನೀಡಿರುವ ಹೇಳಿಕೆಯು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹರಡಿದೆ.

ಅನುಕೂಲವಾಗಲೆಂದು ನಂಜಪ್ಪ ಈ ಈ ಕಾರ್ಯಕ್ರಮ ಮಾಡಿದ್ದರು. ತಂದೆಯವರು ಪ್ರಚಾರದ ಬ್ಯುಸಿಯಲ್ಲಿದ್ದರೂ, 2–3 ಬಾರಿ ಬಂದು ಭೇಟಿಯಾಗಿ, ಹಲವು ಬಾರಿ ದಿನಾಂಕ ನಿಗದಿಯಾಗಿ ರದ್ದಾದರೂ ಪಟ್ಟು ಬಿಡದೇ ನನ್ನ ತಂದೆಯವರಿಂದಲೇ ಕೊಡಿಸಿ ಕಾರ್ಯಕ್ರಮ ಯಶಸ್ವಿಯಾಗಿಸಿದರು. ಸಮಾಜದ ಮತಗಳು ನಮಗೆ ಹೆಚ್ಚಿನ ಪ್ರಮಾಣದಲ್ಲಿ ಸಿಗುವಂತೆ ಮಾಡಿದರು. ನಾನು ಆ ಕಾರ್ಯಕ್ರಮಕ್ಕೆ ಬರಲಾಗಿರಲಿಲ್ಲ’ ಎಂದು ಹೇಳಿದ್ದಾರೆ. ನಾವು ಗೆಲ್ಲಲು ಮಡಿವಾಳ ಸಮಾಜದ ದೊಡ್ಡ ಕೊಡುಗೆ ನೀಡಿದೆ. ಈ ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದ್ದಾರೆ.

ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ವರುಣಾ ಕ್ಷೇತ್ರದಲ್ಲಿ ನಡೆದ ಜಿಲ್ಲಾ ಸಮಾವೇಶದ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಪದಾಧಿಕಾರಿಗಳು ಉಡುಗೊರೆಗಳ ನ್ನು ವಿತರಿಸಿದ್ದಾರೆ. ಪಕ್ಷದಿಂದ ಅಥವಾ ನಮ್ಮ ಕಡೆಯಿಂದ ನೀಡಿಲ್ಲ, ಈ ವೇಳೆ ನಮ್ಮ ತಂದೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. “ನನಗೆ ಸಾಧ್ಯವಾಗದ ಕಾರಣ ನನ್ನ ತಂದೆ ಸಮಾವೇಶಕ್ಕೆ ಹಾಜರಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.

ಯತೀಂದ್ರ ಅವರ ಹೇಳಿಕೆಯನ್ನು ಚುನಾವಣಾ ಆಯೋಗ ಗಮನಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಅರ್ಜಿ ವಿಚಾರಣೆ ಬಾಕಿ ಇದೆ. ಯತೀಂದ್ರ ಅವರ ಹೇಳಿಕೆಯನ್ನು ಸಾಬೀತುಪಡಿಸಲು ಪುರಾವೆಗಳಿದ್ದರೆ, ಇಸಿಐ ಅದನ್ನು ಗಂಭೀರವಾಗಿ ಪರಿಗಣಿಸಬೇಕು, ಉಚಿತ ವಿತರಣೆಯು ಗಂಭೀರ ಅಪರಾಧವಾಗಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!