ಸರ್ಕಾರದ ಯೋಜನೆ ಮನೆಮನೆಗೆ ತಲುಪಿಸಿ- ಲಾಭ ಸರ್ಕಾರಕ್ಕೆ ಸಿಗುವಂತೆ ಮಾಡಿ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುತ್ತಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸ ಬೇಕಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರುಗಳ ಸಭೆಯಲ್ಲಿ ಸಚಿವರು ಮಾತನಾಡಿದರು.

ನಾಲ್ಕು ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷ ಇಡೀ ರಾಜ್ಯದಲ್ಲಿ ಜಯಭೇರಿ ಬಾರಿಸಿದರೂ ಉಡುಪಿ ಜಿಲ್ಲೆಯಲ್ಲಿ ನೆಲಕಚ್ಚಿತು. ಪಕ್ಷದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿ ಮುಂದಿನ ದಿನಗಳಲ್ಲಿ ಸಮರ್ಥವಾಗಿ ಪಕ್ಷವನ್ನು ಕಟ್ಟೋಣ ಎಂದರು. ಉಡುಪಿ ಜಿಲ್ಲೆಯಲ್ಲಿ ಶೇಕಡಾ 95% ಮಂದಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಮಹಿಳೆಯರು ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಇದರ ಲಾಭ ಸರ್ಕಾರಕ್ಕೆ ಸಿಗುವಂತೆ ಮಾಡಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಜಿಲ್ಲಾ ಸಭೆಯಲ್ಲಿ ಪಬ್, ಡ್ರಗ್ಸ್, ಅಕ್ರಮ ಚಟುವಟಿಕೆಗಳನ್ನು ನಿಯಂತ್ರಣ ಮಾಡುವ ಪೊಲೀಸ್ ಇಲಾಖೆಗೆ ಜಿಲ್ಲಾ ಕಾಂಗ್ರೆಸ್ ಕೋರ್ ಕಮಿಟಿ ಸಭೆ ಮೆಚ್ಚುಗೆ ವ್ಯಕ್ತಪಡಿಸಿತು.

ಇದೇ ಸಂದರ್ಭದಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಕೋಟ್ಯಾಂತರ ರೂ.ಮೌಲ್ಯದ ಹಳೆಯ ಯಂತ್ರಗಳನ್ನು ಗುಜರಿಗೆ ಮಾರಾಟದಲ್ಲಿ ಆದ ಅವ್ಯವಹಾರದ ಬಗ್ಗೆ ತ್ವರಿತ ತನಿಖೆ ಮಾಡಲು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಆಗ್ರಹ ಮಾಡಿದ್ದಾರೆ.

ಜಿಲ್ಲಾ ಮರಳು ಸಮಿತಿಯ ಬದಲಾವಣೆ ಮಾಡಲು ಆಗ್ರಹಿಸಿದೆ. ಹಬ್ಬದ ದಿನ ನಡೆಯುವ ಜೂಜು ರಹಿತ ಕೋಳಿ ಅಂಕ, ಸಕ್ರಮ ಮರಳುಗಾರಿಕೆ, ಕಟ್ಟಡ ಸಾಮಗ್ರಿ ಸಾಗಾಟಕ್ಕೆ ಅನುಮತಿ ನೀಡಲು ಯಾವುದೇ ಅಭ್ಯಂತರ ಇಲ್ಲ ಎಂದು ಸಭೆಯಲ್ಲಿ ಮುಖಂಡರು ತಿಳಿಸಿದರು.

ಇನ್ಮುಂದೆ ತಿಂಗಳಲ್ಲಿ ನಾಲ್ಕು ದಿನ ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದು, ಜಿಲ್ಲೆಯ ಅಭಿವೃದ್ಧಿ ಕಡೆ ಗಮನಹರಿಸುವುದರ ಜೊತೆಗೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಸಚಿವರು ತಿಳಿಸಿದರು. ಜಿಲ್ಲೆಯಲ್ಲಿ ಪಕ್ಷ ನೆಲಕಚ್ಚಿರಬಹುದು, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಪಕ್ಷವನ್ನು ಜಿಲ್ಲೆಯಲ್ಲಿ ಸಂಘಟಿಸಬೇಕು ಎಂದು ಸಚಿವರು ಹೇಳಿದರು. ಸಭೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಮಿಥುನ್ ರೈ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!