ಉಡುಪಿ ಜಿಲ್ಲಾಸ್ಪತ್ರೆ ರೋಗಿಗಳಿಗೆ ಖಾಸಗಿಯಲ್ಲಿ ಉಚಿತ ಡಯಾಲಿಸಿಸ್ ಸೇವೆ
ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಸಮಸ್ಯೆ ಹಿನ್ನೆಲೆಯಲ್ಲಿ ಸುಮಾರು 50 ಮಂದಿ ರೋಗಿಗಳಿಗೆ ದಾನಿಗಳ ಸಹಕಾರದಿಂದ 15 ದಿನಗಳ ಕಾಲ ಉಚಿತವಾಗಿ ಡಯಾಲಿಸಿಸ್ ಸೇವೆಯನ್ನು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಶನಿವಾರದಿಂದ ಆರಂಭಿಸಲಾಗಿದೆ.
ಈ ಸಂಬಂಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ವೀಣಾ ಹಾಗೂ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.
‘ಇಂದು ಆದರ್ಶ ಆಸ್ಪತ್ರೆಯಲ್ಲಿ 5 ಮಂದಿ ಡಯಾಲಿಸಿಸ್ ಚಿಕಿತ್ಸೆ ಪಡೆದಿದ್ದು, ರೋಗಿಗಳ ಬೇಡಿಕೆಗೆ ತಕ್ಕಂತೆ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದು, ಮುಂದಿನ ದಿನದಲ್ಲಿ ಅಗತ್ಯತೆ ಮೇರೆಗೆ ಡಾ.ಟಿ.ಎಂ.ಎ. ಪೈ ಆಸ್ಪತ್ರೆಯಲ್ಲೂ ಡಯಾಲಿಸಿಸ್ ಸೇವೆಗೆ ಮಾತುಕತೆ ನಡೆಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು.
ಸರಕಾರ ಕೂಡಲೇ ಬಡ ರೋಗಿಗಳ ಯಾತನೆಯನ್ನು ನೀಗಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಡಯಾಲಿಸಿಸ್ ಸೇವೆ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಈಗಾಗಲೇ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ ಸಲ್ಲಿಸಿದ್ದು, ರಾಜ್ಯ ಸರಕಾರ ಬಡ ರೋಗಿಗಳಿಗೆ ಆರೋಗ್ಯ ಭಾಗ್ಯ ನೀಡುವಲ್ಲೂ ಸರ್ಕಾರ ಮುಂದಾಗಬೇಕೆಂದು ಅವರು ಒತ್ತಾಯಿಸಿದರು.