ರಾಜ್ಯದಲ್ಲಿ ಕೊರೊನಾ‌ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ: ಸಭೆ, ಸಮಾರಂಭಕ್ಕೆ ನಿರ್ಬಂಧ?

ಬೆಂಗಳೂರು: ‘ರಾಜ್ಯದಲ್ಲಿ ಕೊರೊನಾ‌ ಸೋಂಕಿತರ ಸಂಖ್ಯೆ ಮತ್ತೆ ಏರುಮುಖದಲ್ಲಿ ಸಾಗುತ್ತಿರುವುದರಿಂದ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಲು ತೀರ್ಮಾನಿಸಲಾಗಿದೆ. ಎರಡು ದಿನಗಳೊಳಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ತಜ್ಞರ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಾಕ್‌ ಡೌನ್‌ ಸಂಪೂರ್ಣ ಹಿಂಪಡೆದ ಬಳಿಕ ರಾಜಕೀಯ, ಧಾರ್ಮಿಕ ಸಭೆ
ಸಮಾರಂಭಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿವೆ. ಜನರು ಗುಂಪು ಗೂಡುತ್ತಿರುವುದರಿಂದ ಸೋಂಕು ವೇಗವಾಗಿ ಹಬ್ಬುತ್ತಿದೆ’ ಎಂದರು.

ಲಾಕ್‌ಡೌನ್‌ ಅವಧಿಯಲ್ಲಿ ಇದ್ದಂತೆ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಲು ತೀರ್ಮಾನಿಸಲಾಗಿದೆ. ತೀರಾ ಅನಿವಾರ್ಯ ಸಂದರ್ಭಗಳಲ್ಲಿ ಜಿಲ್ಲಾಡಳಿತದ ಅನುಮತಿ ಪಡೆದು, 100 ಜನರಿಗೆ ಸೀಮಿತವಾಗಿ ಸಮಾರಂಭ ನಡೆಸಲು ಮಾತ್ರ ಅವಕಾಶ ನೀಡುವ ಪ್ರಸ್ತಾವವಿದೆ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಮಾಸ್ಕ್‌ ಧರಿಸದೇ ಓಡಾಡುವವರು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಆದೇಶ ಹೊರಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

‘7 ಜಿಲ್ಲೆಗಳಲ್ಲಿ ಹೆಚ್ಚಳ: ರಾಜ್ಯದ 7 ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ
ಯಲ್ಲಿ ಶೇ 12ರಷ್ಟು ಏರಿಕೆ ಕಂಡು ಬಂದಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಶೇ 1.5ರಷ್ಟಿದೆ. ಅದನ್ನು ಶೇ 1ಕ್ಕೆ ಇಳಿಸುವ ಗುರಿಯೊಂದಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

‘ಸರ್ಕಾರದ ಕೋವಿಡ್‌ ನಿಯಂತ್ರಣ ವ್ಯವಸ್ಥೆಯಲ್ಲಿ ನೋಂದಣಿ ಮಾಡಿಸಿಕೊಂಡು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಸ್ವಯಂ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವ ಸೋಂಕಿತರು ನಿಗದಿತ ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಾಗುತ್ತದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!