ಜಾತಿ ಗಣತಿ ಕುರಿತ ಕಾಂತರಾಜು ಸಮಿತಿ ವರದಿ ಮಂಡನೆ: ಈಶ್ವರಪ್ಪ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶೀಘ್ರವೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಈ ಹಿಂದಿನ ಆಯೋಗದ ಅಧ್ಯಕ್ಷ ಕಾಂತರಾಜು ಅವರು ನೇತೃತ್ವದ ಸಮಿತಿಯ ವರದಿಯನ್ನು ವಿಧಾನಮಂಡಲದಲ್ಲಿ ಮಂಡನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಬೆಂಗಳೂರಿನಲ್ಲಿಂದು ಏರ್ಪಡಿಸಿದ್ದ ಹಿಂದುಳಿದ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಮಾಲೋಚನೆ ಸಭೆಯ ಬಳಿಕ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶೀಘ್ರವೇ ಸರ್ಕಾರ ಅಧ್ಯಕ್ಷರನ್ನು ನೇಮಕ ಮಾಡಲಿದೆ. ಈ ಹಿಂದಿನ ಅಧ್ಯಕ್ಷ ಕಾಂತರಾಜು ಅವರು ನೀಡಿರುವ ವರದಿಯನ್ನು ವಿಧಾನಮಂಡನೆಯಲ್ಲಿ ಮಂಡನೆ ಮಾಡಲಾಗುವುದು. ಇದೇ 18ರಂದು ಬೆಂಗಳೂರಿನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಎಲ್ಲಾ 198 ಜಾತಿಗಳ ಪ್ರಮುಖರ ಸಭೆಯನ್ನು ಕರೆಯಲಾಗಿದೆ ತಿಳಿಸಿದರು.
ಇದೇ ವೇಳೆ ಶೀಘ್ರ ಕಾರ್ಮಿಕರಿಗೆಲ್ಲಾ ಮನೆ ಮಂಜೂರು ಮಾಡಲಾಗುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ಮಾಡಲು ಮಾತ್ರ ಸಕ್ರಿಯ
ಅಂತೆಯೇ ರಾಜ್ಯದಲ್ಲಿರುವ ವಿರೋಧ ಪಕ್ಷ ಕೇವಲ ಟ್ವೀಟ್‍ಗೆ ಸೀಮಿತವಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆ ಕಾಂಗ್ರೆಸ್‍ನಲ್ಲೇ ಬೆಲೆ ಇಲ್ಲವಾಗಿದೆ. ಕಾಂಗ್ರೆಸ್‍ಗೆ ಜನ ಬೆಂಬಲವೂ ಇಲ್ಲ. ಹೀಗಾಗಿ ರಾಜ್ಯದಲ್ಲಿರುವುದು ಟ್ವೀಟ್ ವಿರೋಧ ಪಕ್ಷ. ಸಿದ್ದರಾಮಯ್ಯ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆಯೆಂದು ಆರೋಪಿಸುತ್ತಾರೆ. ಅದನ್ನು ಸಾಬೀತು ಪಡಿಸುವುದನ್ನು ಬಿಟ್ಟು, ಟ್ವೀಟ್ ಮಾಡುವುದರಲ್ಲಿ ಕಾಲ ಕಳೆಯುತ್ತಿದ್ದಾರೆ. ಸಿದ್ದರಾಮಯ್ಯ ನಾಟಕ ಮಾಡಿಕೊಂಡೇ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು. ಈಗಲೂ ನಾಟಕವನ್ನೇ ಮಾಡಿಕೊಂಡಿದ್ದಾರೆಂದು ಅವರು ಆರೋಪಿಸಿದ್ದಾರೆ.