ಬಿಜೆಪಿ ರಾಜ್ಯಾಧ್ಯಕರಾಗಿ ಬಿ.ವೈ.ವಿಜಯೇಂದ್ರ ನೇಮಕ
ಬೆಂಗಳೂರು: ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇಮಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು. ಈ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಮತ್ತಿತರ ಹೆಸರುಗಳು ಕೇಳಿಬರುತಿತ್ತು.
ಆದರೆ, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರೂ ರಾಜ್ಯ ರಾಜಕೀಯದಲ್ಲಿ ಲಿಂಗಾಯತ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಪ್ರಭಾವವನ್ನು ಮನಗಂಡ ಹೈಕಮಾಂಡ್, ಕೊನೆಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ಲಿಂಗಾಯತ ವೋಟ್ ಬ್ಯಾಂಕಿನತ್ತ ಚಿತ್ತ ಹರಿಸಿದೆ.