ಉಡುಪಿ: ನ.14ರಿಂದ 70ನೇ ಅಖಿಲ ಭಾರತ ಸಹಕಾರ ಸಪ್ತಾಹ- ಬಿ. ಜಯಕರ ಶೆಟ್ಟಿ ಇಂದ್ರಾಳಿ
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ಬರುವ ನ.14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 70ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಉಡುಪಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ‘5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು’ ಎಂಬ ಧ್ಯೇಯವಾಕ್ಯದೊಂದಿಗೆ ಸಪ್ತಾಹವನ್ನು ಆಚರಿಸಲಾಗುತ್ತಿದೆ.
70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭವು ಉಡುಪಿ ಮದರ್ ಸೊರೋಸ್ ಚರ್ಚ್ ಬಳಿಯ ಲಿಕೋ ಬ್ಯಾಂಕ್ ಗೋಲ್ಡನ್ ಜ್ಯುಬಿಲಿ ಸಭಾಂಗಣದಲ್ಲಿ ನ.14ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದರು.
ಉಡುಪಿ ಎಲ್ ಐಸಿ ಎಂಪ್ಲಾಯೀಸ್ ಕೋ ಆ.ಬ್ಯಾಂಕ್ ಅಧ್ಯಕ್ಷ ಕೆ. ಕೃಷ್ಣ, ಉಡುಪಿ ಟೀಚರ್ಸ್ ಕೋ ಆ.ಬ್ಯಾಂಕ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಪ್ರಭಾರ ಉಪನಿಬಂಧಕ ರಮೇಶ್ ಎಚ್.ಎನ್, ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡುಬಿದಿರೆ ದವಳಾ ಕಾಲೇಜಿನ ಉಪನ್ಯಾಸಕ ಸಂತೋಷ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ನ.15ರಂದು ಸಹಕಾರ ಸಪ್ತಾಹ ಕಾರ್ಯಕ್ರಮವು ಕೋಟ ವ್ಯವಸಾಯ ಸೇವಾ ಸಹಕಾರ ಸಂಘಗಳ ಸಹಯೋಗದೊಂದಿಗೆ ‘ಸಾಲೇತರ ಸಹಕಾರ ಸಂಘಗಳ ಪುನಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ’ ಎಂಬ ವಿಷಯದೊಂದಿಗೆ ಕೋಟ ಬಿ.ಸಿ ಹೊಳ್ಳ ಸಭಾಭವನದಲ್ಲಿ ಮಧ್ಯಾಹ್ನ 12ಗಂಟೆಗೆ ನಡೆಯಲಿದೆ.
ನ.16ರಂದು ‘ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣ ಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ’ ವಿಷಯದೊಂದಿಗೆ ಕಾರ್ಕಳ ಲ್ಯಾಂಪ್ಸ್ ಸಭಾಂಗಣದಲ್ಲಿ ಮಧ್ಯಾಹ್ನ 3ಗಂಟೆಗೆ ಸಪ್ತಾಹ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.
ನ. 17ರಂದು ಉಡುಪಿ ತಾಲೂಕು ಇಂಡಸ್ಟ್ರೀಯಲ್ ಕೋ ಆಪರೇಟಿವ್ ಸೊಸೈಟಿ ಸಹಯೋಗದೊಂದಿಗೆ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳು’ ಎಂಬ ವಿಷಯದೊಂದಿಗೆ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ನಗರಸಭೆ ಪೌರಾಯುಕ್ತ ರಾಯಪ್ಪ ಉದ್ಘಾಟಿಸಲಿದ್ದಾರೆ.
ನ.19ರಂದು ‘ಮಹಿಳೆಯರು, ಯುವಜನ ಮತ್ತು ಅಬಲವರ್ಗಕ್ಕೆ ಸಹಕಾರ ಸಂಸ್ಥೆಗಳು’ ಎಂಬ ವಿಷಯದೊಂದಿಗೆ ಕೋಟೇಶ್ವರ ಕಮಲಮ್ಮ ಸರ್ವೋತ್ತಮ ಬುದ್ಧ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 9.30ಕ್ಕೆ ನಡೆದರೆ, ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವು ‘ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆ’ ವಿಷಯದೊಂದಿಗೆ
ನ.20ರಂದು 10.30ಕ್ಕೆ ಪಡುಬಿದ್ರಿಯ ಸಹಕಾರ ಸಂಗಮ ವೈ ಲಕ್ಷ್ಮಣ ಸಭಾಂಗಣದಲ್ಲಿ ಜರುಗಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ಶಂಕರ ಪೂಜಾರಿ ಕಟಪಾಡಿ, ಮನೋಜ್ ಕರ್ಕೇರ, ಯೂನಿಯನ್ ನ ಸಿಇಒ ಹಾಲಪ್ಪ ಕೋಡಿಹಳ್ಳಿ ಮತ್ತು ವಿಶ್ವನಾಥ್, ಅರುಣ್ ಇದ್ದರು.