ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಹಕ್ಕೊತ್ತಾಯ
ಕಾರ್ಕಳ: ರಾಜ್ಯದ ಪ್ರವಾಸೋದ್ಯಮದಲ್ಲಿ ಕರಾವಳಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ.ಆದರೆ ದೀಪದ ಕೆಳಗೆ ಕತ್ತಲು ಎಂಬಂತೆ ಕರಾವಳಿ ಜಿಲ್ಲೆಗಳಲ್ಲಿನ ಪರಿಣಾಮಕಾರಿ ಅಭಿವೃದ್ಧಿಯಾಗಿಲ್ಲ.ಕರಾವಳಿ ಕರ್ನಾಟಕದ ಉಳ್ಳಾಲದಿಂದ ಕಾರವಾರದವರೆಗಿನ ಸುಮಾರು 320 ಕಿ.ಮೀ ಸಮುದ್ರ ತೀರವು ನಿರಂತರವಾಗಿ ಪ್ರತೀವರ್ಷ ಕಡಲ್ಕೊರೆತದ ಹೊಡೆತಕ್ಕೆ ಸಿಲುಕಿದ್ದರೂ ಈವರೆಗೂ ಕಡಲ್ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ,ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳ ಬೇಕೆಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ ಡಿ.ಆರ್ ರಾಜು ಒತ್ತಾಯಿಸಿದರು.
ಅವರು ಕಾರ್ಕಳದ ಹೊಟೇಲ್ ಕಟೀಲು ಇಂಟರ್ ನ್ಯಾಶನಲ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ,ರಾಜ್ಯದ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಅಭಿವೃದ್ಧಿ ವಿಚಾರದಲ್ಲಿ ಕರಾವಳಿಯ ಜಿಲ್ಲೆಗಳು ತೀರಾ ಹಿಂದುಳಿದಿವೆ. ಪ್ರಮುಖವಾಗಿ ನಮ್ಮ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಾಗಿರುವ ಪಶ್ಚಿಮ ಘಟ್ಟದ ಶ್ರೇಣಿಯ ರಸ್ತೆಗಳ ಅಭಿವೃದ್ಧಿಯಾಗಬೇಕು. ಎಲ್ಲಾ ಪ್ರಮುಖ ಸಂಪರ್ಕ ರಸ್ತೆಗಳು ಚತುಷ್ಪಥ ರಸ್ತೆಗಳಾದರೆ ಮೂಲಸೌಕರ್ಯ ಅಭಿವೃದ್ಧಿಯಾಗುತ್ತದೆ ಜತೆಗೆ ಪ್ರವಾಸೋದ್ಯಮವೂ ಬೆಳೆಯಲು ಸಾಧ್ಯವಿದೆ ಎಂದರು. ಕಡಲ್ಕೊರೆತ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯರ ತಾಂತ್ರಿಕ ಪರಿಣಿತ ತಂತ್ರಜ್ಞರ ಜತೆ ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. ಇದಲ್ಲದೇ ಕರಾವಳಿ ಜಿಲ್ಲೆಗಳ ಯುವಕರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಹೊಸ ಕಂಪೆನಿಗಳು ಬರಬೇಕು, ಹಾಲಿ ಇರುವ ಎಂಆರ್ಪಿಎಲ್ , ನಾಗಾರ್ಜುನ ವಿದ್ಯುತ್ ಕಂಪೆನಿಗಳಲ್ಲಿ ಶೇ 95ರಷ್ಟು ಹೊರರಾಜ್ಯದವರೇ ತುಂಬಿದ್ದು ಸ್ಥಳೀಯರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಆದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆಗಳು ಬೆಳೆಯಬೇಕಿದೆ ಎಂದು ಡಿ.ಆರ್ ರಾಜು ಹೇಳಿದರು. ಇದಲ್ಲದೇ ಪರಿಸರ ಸಂರಕ್ಷಣೆ, ನೆಲ, ಜಲದ ಸಂರಕ್ಷಣೆಯಲ್ಲಿ ನಮ್ಮ ಸಂಘಟನೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ, ಅರಣ್ಯ ನಾಶವನ್ನು ತಡೆಯುವ ನಿಟ್ಟಿನಲ್ಲಿ ರುದ್ರಭೂಮಿಗಳಲ್ಲಿ ವಿದ್ಯುತ್ ಚಿತಾಗಾರವನ್ನು ನಿರ್ಮಾಣ ಮಾಡಬೇಕೆನ್ನುವುದು ಸರ್ಕಾರಕ್ಕೆ ನಮ್ಮ ಒತ್ತಾಯವಾಗಿದೆ ಎಂದರು.
ಈ ವಿಚಾರವಾಗಿ ನವೆಂಬರ್ 18ರಂದು ಶನಿವಾರ ಬೆಳಗ್ಗೆ 10.30ಕ್ಕೆ ಉಡುಪಿಯ ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ ಎಂದರು.
ಈ ಕಾರ್ಯಕ್ರಮವನ್ನು ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ವೈದ್ಯ ಉದ್ಘಾಟಿಸಲಿದ್ದು,ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಎಲ್.ವಿ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಪ್ರವಾಸೋದ್ಯಮ ಮತ್ತು ಬಂದರು ಹಾಗೂ ಜಲಸಾರಿಗೆ ಸಚಿವ ಶ್ರೀಪಾದ ನಾಯ್ಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶಾಸಕರಾದ ಯಶಪಾಲ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಡಿ. ಆರ್ ರಾಜು ಹೇಳಿದರು.
ಸುದ್ಧಿಗೋಷ್ಟಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಸಂಸ್ಥಾಪಕ ತೋನ್ಸೆ ಜಯಕ್ರಷ್ಣ ಎ ಶೆಟ್ಟಿ, ಮುಂಡ್ಕೂರು ಸುರೇಂದ್ರ ಸಾಲಿಯಾನ್, ಅರುಣ್ ಶೆಟ್ಟಿ ಮೂಡಬಿದ್ರೆ, ಉಪಸ್ಥಿತರಿದ್ದರು