ಪಕ್ಷದಲ್ಲಿ ಅಸಮಾಧಾನ ಇರುವುದು ಸತ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಮೈಸೂರು: ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಇಲ್ಲ. ಸಣ್ಣಪುಟ್ಟ ಅಸಮಾಧಾನ ಸಹಜ. ಬಸವವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿ‌ಹೊಳಿ, ಅರವಿಂದ್ ಬೆಲ್ಲದ್ ಅವರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ ನಂತರವಷ್ಟೇ ಬಿಜೆಪಿ ಸಭೆಯಿಂದ ಹೊರ ನಡೆದಿದ್ದಾರೆ. ಅವರೆಲ್ಲರೂ ನಮ್ಮ ಪಕ್ಷದ ಹಿರಿಯ ನಾಯಕರು. ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ. ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಒಂದಷ್ಟು ಅಸಮಾಧಾನ ಇರುವುದು ಸತ್ಯ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕೆಲಸವನ್ನು ರಾಜ್ಯಾಧ್ಯಕ್ಷನಾಗಿ ನಾನು ಮಾಡುತ್ತೇನೆ. ಹಿರಿಯ ನಾಯಕರನ್ನು ಭೇಟಿ ಮಾಡುವುದು ನನ್ನ ಜವಾಬ್ದಾರಿ. ಶೀಘ್ರದಲ್ಲೇ ಹೋಗಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.

ಕೇಂದ್ರದ ವರಿಷ್ಠ ನಾಯಕರು ಅತ್ಯಂತ ಮಹತ್ವದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ನನಗೆ ನೀಡಿದ್ದಾರೆ. ಈ ಹುದ್ದೆಯ ಮಹತ್ವವನ್ನು ಅರಿತುಕೊಂಡು ಪಕ್ಷದ ಹಿರಿಯ ನಾಯಕರು ಹಾಗು ಎಲ್ಲರನ್ನೂ ಒಗ್ಗೂಡಿಸಿ ಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವುದು ಮೊದಲ ಗುರಿ. ದಕ್ಷಿಣ ಭಾರತದಲ್ಲಿ ಬಿಜೆಪಿ ಭದ್ರಕೋಟೆಯಾಗಿರುವ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಎರಡನೇ ಗುರಿ. ಲೋಕಸಭೆ, ವಿಧಾನಸಭೆ ಚುನಾವಣೆಗೆ ನೀಡುವ ಮಹತ್ವವನ್ನು ಜಿಲ್ಲಾ ತಾಲ್ಲೂಕು ಪಂಚಾಯತ್ ಚುನಾವಣೆಗೂ ನೀಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!