ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯ ನಡೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗರಂ
ಉಡುಪಿ: ಕೆಡಿಬಿ ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಉಡುಪಿ ಎಸ್ಪಿ ಅವರನ್ನು ತರಾಟೆಗೆ ತೆಗೆದುಕೊಂಡ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್ ನಡೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿ ಕಾಮಗಾರಿ ಬಗ್ಗೆ ತ್ರೈಮಾಸಿಕ ಸಭೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದಿತ್ತು. ಸಭೆಯಲ್ಲಿ ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಈ ಹಿಂದೆ ಕಟ್ಟಡ ಸಾಮಾಗ್ರಿ ಸಾಗಾಟದ ಟೆಂಪೋ- ಲಾರಿ ಮಾಲಕರ ಸಂಘದ ಸದಸ್ಯರು ರಾಷ್ಟ್ರೀಯ ಹೆದ್ದಾರಿ ಬದಿ ತಮ್ಮ ವಾಹನ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಹಲವು ದಿನಗಳ ಕಾಲ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರ ಪರಿಣಾಮ ಸಾರ್ವಜನಿಕರ ದೂರಿನ ಹಿನ್ನೆಲೆ ವಾಹನ ತೆರವು ಗೊಳಿಸದ ವಾಹನ ಮಾಲಕರಿಗೆ ಪೊಲೀಸ್ ಇಲಾಖೆ ನೋಟಿಸ್ ನೀಡಿದ್ದರು.
ಈ ಬಗ್ಗೆ ಶಾಸಕ ಸುನಿಲ್ ಅವರು ನಿನ್ನೆ ನಡೆದ ಕೆಡಿಬಿ ಸಭೆಯಲ್ಲಿ ಉಡುಪಿಯ ಎಸ್ಪಿ ಡಾ.ಅರುಣ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಾಗ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಾನೂನಿನ ಪ್ರಕಾರ ಕರ್ತವ್ಯ ನಿರ್ವಹಿಸಿದ ಎಸ್ಪಿ ಅವರ ಪರವಾಗಿ ಮಾತನಾಡುವುದು ಬಿಟ್ಟು, ಸಭೆಯಲ್ಲಿ ಎಸ್ಪಿಯವರಿಗೆ ಸುಮ್ಮನಿರುವಂತೆ ಹೇಳಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ದಕ್ಷ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದ ಡಾ.ಅರುಣ್ ಕುಮಾರ್ ಅವರು ಜಿಲ್ಲೆಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಜನಸಾಮಾನ್ಯರಲ್ಲಿ ಉತ್ತಮ ಅಧಿಕಾರಿಯಾಗಿರುವವರ ಪರವಾಗಿರದೆ ಉಡುಪಿ ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡಲು ಹೊರಟ ಉಸ್ತುವಾರಿ ಸಚಿವೆ ಹೆಬ್ಬಾಳ್‌ಕರ್ ನಡೆಗೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ಹೊರಹಾಕಿದ್ದಾರೆ.
ಪಕ್ಷ ಅಧಿಕಾರಕ್ಕೆ ಬಂದು ಅರ್ಧ ವರ್ಷ ಕಳೆದರೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಚೇತರಿಕೆ ಹಾದಿಯಲ್ಲಿ ಇಲ್ಲ. ಇವರೆಗೆ ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಪಂಚಾಯತ್ ,ತಾಲೂಕು ಪಂಚಾಯತ್, ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದೆ. ಆದರೇ ಜಿಲ್ಲೆಯಲ್ಲಿ ಕಾರ್ಯಕರ್ತರ ಜೊತೆ ಸಮಾಲೋಚನೆ, ಪಕ್ಷವನ್ನು ಸಂಘಟಿಸುವ ಯಾವುದೇ ಗೋಜಿಗೆ ಹೋಗದೆ ಕೇವಲ ಬಿಜೆಪಿ ಪಕ್ಷದ ಶಾಸಕರ ಜೊತೆ ಹೊಂದಾಣಿಕೆ ಮಾಡಿಕೊಂಡು ಜಿಲ್ಲೆಯಲ್ಲಿ ಅಲ್ಪಸ್ವಲ್ಪ ಮತಗಳಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಹಿನ್ನಡೆಯಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.