ಸುಳ್ಳು ಸುದ್ದಿ ತಡೆಗೆ ಬೆಳಗಾವಿ ಚಳಿಗಾಲದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ- ಡಾ.ಜಿ. ಪರಮೇಶ್ವರ್
ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ ಕರಡು ಸಿದ್ಧಪಡಿಸಿದೆ. “ಗೃಹ ಇಲಾಖೆ, ಐಟಿ ಇಲಾಖೆಯೊಂದಿಗೆ ಸಮನ್ವಯದೊಂದಿ ಗೆ ಕರಡು ಸಿದ್ಧಪಡಿಸಿದೆ ಮತ್ತು ಮುಂಬರುವ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು 54,000 ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಲ್ಲದೆ, ಇನ್ನೂ 1,000 ಪಿಎಸ್ಐಗಳನ್ನು ನೇಮಕ ಮಾಡುವ ಯೋಜನೆಯನ್ನು ಸರ್ಕಾರ ಹೊಂದಿದೆ. ಇದು ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳವ ಸಾಧ್ಯತೆಯಿದೆ ಎಂದು ತಿಳಿಸಿದರು.