ಸಿಎಂ ಸಿದ್ದರಾಮಯ್ಯ ಅವರ ಜನ ಸ್ಪಂದನಗೆ ಹರಿದು ಬಂದ ಜನಸಾಗರ: 3,812 ಅರ್ಜಿ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ‘ಜನಸ್ಪಂದನ’ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಜನಸಾಗರವೆ ಹರಿದು ಬಂದಿತ್ತು.

ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾದ ‘ಜನಸ್ಪಂದನ’ ಕಾರ್ಯಕ್ರಮಕ್ಕೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ದೊರೆಯಿತು. ಮಹಿಳೆಯರು, ವಿಕಲಚೇತನರು, ವೃದ್ಧರು ಸೇರಿದಂತೆ ಸಾವಿರಾರು ಜನರು ತಮ್ಮ ಅಹವಾಲುಗಳನ್ನು ಮುಖ್ಯಮಂತ್ರಿ ಎದುರು ಹೇಳಿಕೊಂಡರು.

‘ಜನಸ್ಪಂದನ’ ಬಹುತೇಕ ಜನರ ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಸಿಗುವ ವೇದಿಕೆಯಾಗಿತ್ತು. ಒಟ್ಟು 3,812 ಅರ್ಜಿಗಳನ್ನು ಸ್ವತಃ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನರ ಸಮಸ್ಯೆಗಳಿಗೆ ಪರಿಹಾರ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳಿಕ ಅಹವಾಲು ಹೇಳಿಕೊಳ್ಳಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೆ ತಾವಿದ್ದಲ್ಲಿಗೆ ಊಟ ತರಿಸಿಕೊಂಡು ಸೇವನೆ ಮಾಡಿದರು. ಪುನಃ ಅಹವಾಲುಗಳನ್ನು ಆಲಿಸಿದರು. ಅಲ್ಲದೆ, ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ್ದವರಿಗೂ ಉಪಹಾರ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದೆಯೆ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ನಡೆಸಲು ಸಾಧ್ಯವಾಗಿರಲಿಲ್ಲ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಿಗೂ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೆ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3812 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸ ಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‍ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸ ಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೆ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲ್ಲದಿದ್ದಲ್ಲಿ, ಪರಿಹಾರ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಕೈಗೊಂಡಿದ್ದಾರೆ ಎಂದು ಪರಿಶೀಲನೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ. ಜನಪ್ರತಿನಿಧಿಗಳು ಹಾಗೂ ಸರಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಅವರು ಹೇಳಿದರು.

ಈ ವರ್ಷ 4 ಸಾವಿರ ತ್ವಿಚಕ್ರ ವಾಹನಗಳನ್ನು ವಿಕಲಚೇತನರಿಗೆ ನೀಡಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಆನ್‍ಲೈನ್ ಮೂಲಕ ಅಹವಾಲು ಸಲ್ಲಿಸಲು ಅವಕಾಶ: ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮನೆಯಲ್ಲೆ ಕುಳಿತು ಕುಂದುಕೊರತೆ, ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇದಕ್ಕಾಗಿ ಪ್ರತ್ಯೇಕ ಕ್ಯೂಆರ್ ಕೋಡ್ ಸೃಜಿಸಲಾಗಿತ್ತು. ಇದನ್ನು ಸ್ಕಾನ್ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆ ಮೂಲಕ ಬರುವ ಅಹವಾಲು ಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿಯೆ ಸ್ವೀಕೃತವಾದ ಅಹವಾಲೆಂದು ಪರಿಗಣಿಸಲಾಗುತ್ತದೆ.

ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿ, ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಕುಂದುಕೊರತೆ, ಅಹವಾಲಿನ ಸ್ಥಿತಿಗತಿಯನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ಅಥವಾ 1902 ಸಂಖ್ಯೆಗೆ ಕರೆಮಾಡಿ ತಿಳಿದುಕೊಳ್ಳಬಹುದು.ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್ ಎಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಐಪಿಜಿಆರ್‍ಎಸ್ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.


Leave a Reply

Your email address will not be published. Required fields are marked *

error: Content is protected !!