ಲೋಕಸಭೆ ಚುನಾವಣೆ- ನಾನು ಸ್ಪರ್ಧೆ ಮಾಡಲ್ಲ, ಪ್ರಜ್ವಲ್ ಸ್ಪರ್ಧೆ: ದೇವೇಗೌಡ ಘೋಷಣೆ

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ ದೇವೇಗೌಡ ಅವರು ಶುಕ್ರವಾರ ಘೋಷಿಸಿದ್ದಾರೆ.

ಇಂದು ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ. ಹಾಸನದಿಂದ ಪ್ರಜ್ವಲ್ ರೇವಣ್ಣ ಅವರೇ ಮತ್ತೆ ಸ್ಪರ್ಧೆ ಮಾಡಲಿದ್ದಾರೆ ಎಂದರು.

ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ನನಗೆ ಇನ್ನೂ ಎರಡೂವರೆ ವರ್ಷ ರಾಜ್ಯಸಭೆ ಅಧಿಕಾರ ಇದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದರ ಬಗ್ಗೆ ಯಾವುದೇ ಸಂಶಯ, ಗೊಂದಲಬೇಡ ಎಂದರು.

ಜೆಡಿಎಸ್ – ಬಿಜೆಪಿ ಸೀಟು ಹಂಚಿಕೆ ಸಂಬಂಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಅಮಿತ್‌ ಶಾ ಅವರೊಂದಿಗೆ ಮೊದಲನೇ ಹಂತದ ಮಾತುಕತೆ ನಡೆಸಿದ್ದಾರೆ. 5 ರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರ ಜೊತೆ ಸಮಾಲೋಚನೆ ಮಾಡಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!