ಎಂ.ಎಂ.ಕಲಬುರ್ಗಿ, ಗೌರಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಸಿಎಂ ಸೂಚನೆ
ಬೆಳಗಾವಿ, ಡಿ.6: ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹಾಗೂ ಹಿರಿಯ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿ ವಿಶೇಷ ನ್ಯಾಯಾಲಯ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಸಂಬಂಧ ಒಳಾಡಳಿತ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವ ಮುಖ್ಯಮಂತ್ರಿ, ಎಂ.ಎಂ.ಕಲಬುರ್ಗಿ 2015ರ ಆ.31ರಂದು ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆಯಾಗಿ ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ 2018-19ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದ ವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರಿದಿವೆ ಎಂದು ತಿಳಿಸಿದ್ದಾರೆ.
ಈಗಾಗಲೆ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಮೃತರ ಪತ್ನಿ ಉಮಾದೇವಿ ಎಂ.ಕಲಬುರ್ಗಿ ಕೋರಿದ್ದು, ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ 2017ರ ಸೆ.5ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿ ದ್ದು, 1200 ಪುರಾವೆ ಹಾಗೂ 500ಕ್ಕೂ ಹೆಚ್ಚು ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ 2022ರ ಜುಲೈ ನಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದುದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಮೃತರ ಸಹೋದರಿ ಕವಿತಾ ಲಂಕೇಶ್ ಕೋರಿದ್ದು, ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.