ಶಿರಸಿ: ಮದುವೆ ಹೊರಟ ಕಾರು ಬಸ್ಸಿಗೆ ಡಿಕ್ಕಿ- ಮಂಗಳೂರಿನ ನಾಲ್ವರು ಸಹಿತ ಐದು ಮಂದಿ ಮೃತ್ಯು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ಕುಮುಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣರಾವ್ ಬಾಬುರಾವ್ (71), ವಿದ್ಯಾಲಕ್ಷ್ಮಿ ಕೊಂ ರಾಮಕೃಷ್ಣರಾವ್ (67)  ಪುಷ್ಪಾ ಮೋಹನ್ ರಾವ್ (62), ಇನ್ಪೋಸಿಸ್ ಇಂಜನೀಯರ್ ಸುಹಾಸ್  ಗಣೇಶ್ ರಾವ್ (30) ಚೆನ್ನೈನ ಅರವಿಂದ್ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದರೆ. ಮತ್ತೊಬ್ಬರು ಅವರ ಸ್ನೇಹಿತರು ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!