ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ, ಆನ್ ಲೈನ್ ತರಗತಿಗಳು ಹಳ್ಳಿಗಳ ವಿದ್ಯಾರ್ಥಿಗಳಿಗೆ ದೊರಕುವುದಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿತ್ತು.
ಆದರೆ ವಿದ್ಯಾಗಮ ಕಾರ್ಯಕ್ರಮ ಆರಂಭವಾದ ನಂತರ ಹಲವು ಮಕ್ಕಳು ಮತ್ತು ಶಿಕ್ಷಕರಿಗೆ ಕೊರೋನಾ ಸೋಂಕು ತಗಲಿದೆ, ಇದರಿಂದ ಮಕ್ಕಳು ಮತ್ತು ಶಿಕ್ಷಕರ ಜೀವಕ್ಕೆ ಅಪಾಯವಾಗುತ್ತಿದೆ ಎಂದು ರಾಜ್ಯದ ಹಲವು ಜಿಲ್ಲೆಗಳಿಂದ ವ್ಯಾಪಕವಾದ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಮತ್ತು ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೆ ವಿದ್ಯಾಗಮ ಕಾರ್ಯಕ್ರಮವನ್ನು ಪುನರಾರಂಭಿಸುವುದಿಲ್ಲ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಕಟಿಸಿದ್ದಾರೆ.