ಬೈಂದೂರು ರೈಲ್ವೇ ನಿಲ್ದಾಣದ ಅಭಿವೃದ್ಧಿಗೆ 14 ಕೋಟಿ ಅನುದಾನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮನವಿ
ಬೈಂದೂರು, ಡಿ.21: ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಯ ಕುರಿತು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಕೊಡಚಾದ್ರಿ, ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಗಳಂತಹ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಸಾಧ್ಯತೆಗಳ ಪ್ರದೇಶಗಳು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿವೆ ಎಂಬುದನ್ನು ಸಂಸದರು, ಸಚಿವರಿಗೆ ಮನದಟ್ಟು ಮಾಡಿದರು.
ತುರ್ತಾಗಿ ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣವನ್ನು ‘ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಏಜೆನ್ಸಿಗಳಿಗೆ ನೆರವು’ ಅಡಿಯಲ್ಲಿ ಅಭಿವೃದ್ಧಿ ಪಡಿಸಲು 14.00 ಕೋಟಿ ರೂ. ಅನುದಾನ ವನ್ನು ಮಂಜೂರು ಮಾಡುವಂತೆ ರಾಘವೇಂದ್ರ ಅವರು ಸಚಿವ ರಿಶನ್ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಸಂಸದರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಯೋಜನೆಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.