ಬ್ಯಾಂಕಿಂಗ್, ಶಿಕ್ಷಣ, ಆರೋಗ್ಯ ಸಂಸ್ಥೆಗಳು, ಇಂದು ಭವಿಷ್ಯವಾಗಿದೆ-ರಾಜೇಶ್ ಪ್ರಸಾದ್

ಉಡುಪಿ: ಡಾ.ಟಿಎಂಎ ಪೈ 1949ರಲ್ಲಿ ಕಂಡಿದ್ದ ಕನಸು ಇಂದು ಸಕಾರಗೊಂಡಿದೆ. ಅವರು ಜನತಾ ಸೇವೆಯೆ ಜನಾರ್ದನ ಸೇವೆಯ ತತ್ವದೊಂದಿಗೆ ಅಂದು ಜನರ ಬದುಕಿಗೆ ಆಧಾರವಾಗಿ ಆರಂಭಿಸಿದ್ದ ಬ್ಯಾಂಕಿಂಗ್, ಶಿಕ್ಷಣ, ಆರೋಗ್ಯ ಸಂಸ್ಥೆಗಳು, ಇಂದು ಭವಿಷ್ಯವಾಗಿ ಮುಂದುವರಿದಿದೆ ಎಂದು ಎಂಜಿಎಂ ಕಾಲೇಜಿನ ಹಳೆ ವಿದ್ಯಾರ್ಥಿ, ಜಮ್ಮು ಕಾಶ್ಮೀರ ಇಂಧನ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಶ್ ಪ್ರಸಾದ್ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜು ಅಮೃತ ಮಹೋತ್ಸವ ಪ್ರಯುಕ್ತ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶನಿವಾರ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾದ ‘ಅಮೃತ ಸಂಗಮ’ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಮಾಹೆ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಶ್ರೇಯೋಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳೇ ಆಧಾರಸ್ತಂಭವಾಗಿದ್ದಾರೆ. ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿರುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಕಾಲೇಜು ವಿಶ್ವಸ್ತ ಮಂಡಳಿಯ ಅಧ್ಯಕ್ಷ ಟಿ.ಸತೀಶ್ ಪೈ ವಹಿಸಿದ್ದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ನಿವೃತ್ತ ಪ್ರಾಧ್ಯಾಪಕರು, ನಿವೃತ್ತ ಶಿಕ್ಷಕಕೇತರ ಸಿಬಂದಿಯನ್ನು ಸನ್ಮಾನಿಸಲಾಯಿತು.

ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಪ್ರೊ.ಶ್ರೀಶ ಆಚಾರ್ಯ, ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ ಸಂಜಯ ಹೆಗ್ಡೆ, ಮಾಹೆ ಸಿಒಒ ಡಾ.ಆನಂದ ವೇಣುಗೋಪಾಲ್, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯದರ್ಶಿ ಬಿ.ಪಿ.ವರದರಾಯ ಪೈ, ಹಳೆ ವಿದ್ಯಾರ್ಥಿ ಸಂಘದ ಖಜಾಂಚಿ ದೀಪಾಲಿ ಕಾಮತ್, ಎಂಜಿಎಂ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ, ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ನಾಯ್ಕ್, ಪಿಯು ಕಾಲೇಜು ಪ್ರಾಂಶುಪಾಲೆ ಮಾಲತಿ ದೇವಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಪಸ್ಥಿತರಿದ್ದರು.

ಅಮೃತ ಸಂಗಮ ಪ್ರಧಾನ ಸಂಘಟಕ ಪ್ರೊ.ಎಂ.ಎಲ್. ಸಾಮಗ ಸ್ವಾಗತಿಸಿ, ಪ್ರಸ್ತಾವನೆಗೈದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ.ಎಂ.ವಿಶ್ವನಾಥ ಪೈ ವಂದಿಸಿದರು. ಡಾ.ವಿಜಯೇಂದ್ರ ವಸಂತ್ ಹಾಗೂ ರೋಹಿಣಿ ನಾಯಕ್ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!