ಸಹಕಾರ ಬ್ಯಾಂಕ್‌ಗಳಿಂದ 439.7ಕೋಟಿ ರೂ. ಸಾಲ ಪಡೆದು ವಂಚನೆ ಆರೋಪ: ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

ಬೆಂಗಳೂರು: ಸಹಕಾರಿ ಬ್ಯಾಂಕ್‌ನಿಂದ 439.7 ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೆ ವಂಚಿಸಿದ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಪ್ರಧಾನ ವ್ಯವಸ್ಥಾಪಕ ರಾಜಣ್ಣ ಅವರು ಶುಕ್ರವಾರ ದೂರು ದಾಖಲಿಸಿದ್ದಾರೆ. ರಮೇಶ್‌ ಜಾರಕಿಹೊಳಿ ಅವರು ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬೆಳಗಾವಿಯ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌ ಸಕ್ಕರೆ ಕಾರ್ಖಾನೆಯ ಸ್ಥಾಪನೆ, ವಿಸ್ತರಣೆ ಹಾಗೂ ನಿರ್ವಹಣೆಗಾಗಿ 2013 ರಿಂದ 2017ರವರೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಮತ್ತು ಅದರ ಸಮೂಹ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದರು. ನಂತರ ಆ ಸಾಲ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಖಾನೆಗೆ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ ಹಾಗೂ ಅದರ ಸಮೂಹ ಬ್ಯಾಂಕ್‌ಗಳಾದ ವಿಜಯಪುರ ಜಿಲ್ಲಾಕೇಂದ್ರ ಸಹಕಾರ ಬ್ಯಾಂಕ್‌, ತುಮಕೂರು ಜಿಲ್ಲಾಕೇಂದ್ರ ಸಹಕಾರ ಬ್ಯಾಂಕ್‌, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಮತ್ತು ಉತ್ತರ ಕನ್ನಡ ಜಿಲ್ಲಾಕೇಂದ್ರ ಸಹಕಾರ ಬ್ಯಾಂಕ್‌ನಿಂದ 2013ರ ಜುಲೈನಿಂದ 2017ರ ಮಾರ್ಚ್‌ವರೆಗೆ ಹಂತ- ಹಂತವಾಗಿ 232 ಕೋಟಿ ರೂ. ಸಾಲ ಪಡೆಯಲಾಗಿದೆ. ನಂತರ ಸಾಲ ಕಟ್ಟಿಲ್ಲ. ಅಸಲು ಮತ್ತು ಬಡ್ಡಿ ಸೇರಿ 2023ರ ಆಗಸ್ಟ್‌ ಅಂತ್ಯಕ್ಕೆ ಒಟ್ಟಾರೆ 439 ಕೋಟಿ ರೂ. ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ರಾಜಣ್ಣ ಹೇಳಿದ್ದಾರೆ.

ಸಾಲ ಮರುಪಾವತಿಸುವವರೆಗೂ ಬ್ಯಾಂಕ್‌ನ ಅನುಮತಿ ಇಲ್ಲದೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌ನ ಆಡಳಿತ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಮತ್ತು ನಿರ್ದೇಶಕರನ್ನು ಬದಲಿಸ ಬಾರದೆಂದು ಸಾಲ ಮಂಜೂರಾತಿ ಸಂದರ್ಭದಲ್ಲೇ ಷರತ್ತು ವಿಧಿಸಲಾಗಿತ್ತು. ಆದರೆ, ಆರೋಪಿಗಳು ಸಾಲ ಮರುಪಾವತಿ ಮಾಡುವುದರಿಂದ ತಪ್ಪಿಸಿ ಕೊಳ್ಳಲು ಮತ್ತು ಬ್ಯಾಂಕ್‌ಗೆ ಮೋಸ ಮಾಡುವ ದುರುದ್ದೇಶಕ್ಕೆ ಕಾರ್ಖಾನೆ ಆಡಳಿತ ಮಂಡಳಿಯ ಹುದ್ದೆಗಳಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಬ್ಯಾಂಕ್‌ಗೆ ಮಾಹಿತಿ ಸಹ ಕೊಟ್ಟಿಲ್ಲ. ಜತೆಗೆ, ಕಾರ್ಖಾನೆಗೆ ಸಂಬಂಧಪಡದ ವ್ಯಕ್ತಿಗಳನ್ನು ಆಡಳಿತ ಮಂಡಳಿಯ ನಿರ್ದೇಶಕರ ಹುದ್ದೆಗೆ ನೇಮಿಸಿ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ವಿಶ್ವೇಶ್ವರಪುರಂ ಪೊಲೀಸರು ಐಪಿಸಿ ಸೆಕ್ಷನ್ 406 (ಕ್ರಿಮಿನಲ್ ನಂಬಿಕೆ ದ್ರೋಹ) ಮತ್ತು 420 (ವಂಚನೆ) ಅಡಿಯಲ್ಲಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!