ಆಸ್ತಿ ತೆರಿಗೆ ವಿನಾಯ್ತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇವೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಆಸ್ತಿ ತೆರಿಗೆ ವಿನಾಯ್ತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಗಾಂಧಿ ನಗರದ ಶಿರೂರ್ ಉದ್ಯಾನ ವನದಲ್ಲಿ ಮಂಗಳವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿ ಕುರಿತ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30×40 ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ. ಆಸ್ತಿ ತೆರಿಗೆ ವಿಚಾರದಲ್ಲಿ ಸಮಸ್ಯೆ ಆಗಿದೆ ಎಂಬ ಅನೇಕ ದೂರುಗಳು ಬಂದಿವೆ. ಕಾಲಮಿತಿಯೊಳಗೆ ತೆರಿಗೆ ಪಾವತಿಸಿ ಎಂದು ನೋಟೀಸ್ ಬಂದಿರುವುದರ ಬಗ್ಗೆ ಗಾಬರಿಯಾಗಬೇಡಿ. ದಂಡವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ. ಈ ಕಾರ್ಯಕ್ರಮ ನಡೆದ ಎಲ್ಲಾ ಕ್ಷೇತ್ರಗಳಲ್ಲೂ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದರು.
2020ರಲ್ಲಿ ಜಾರಿಗೆ ಬಂದ ಆಸ್ತಿ ತೆರಿಗೆ ಕುರಿತ ಕಾಯ್ದೆಯಿಂದಾಗಿ ಜನರಿಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಈಗ ಆ ಕಾನೂನಿಗೆ ತಿದ್ದುಪಡಿ ತರಬೇಕಿದೆ. ಕೆಲ ದಿನಗಳಲ್ಲಿ ಈ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗುವುದು. ನಮ್ಮ ಸರ್ಕಾರವೇ ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೇ ನಿಮ್ಮ ಸ್ವತ್ತಿನ ದಾಖಲೆಗಳನ್ನು ಉಚಿತವಾಗಿ ತಂದು ಕೊಡಲಾಗುವುದು. ಆಸ್ತಿ ತೆರಿಗೆ ಪಾವತಿ ಬಗ್ಗೆ ಜನರ ಮೇಲೆ ಒತ್ತಡ ಹೇರಬೇಡಿ ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಯಾರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೋ, ಅವರಿಂದ ಅಷ್ಟು ಕಟ್ಟಿಸಿಕೊಳ್ಳಿ. ಯಾರಾದರೂ ಹೆಚ್ಚುವರಿ ತೆರಿಗೆ ಪಾವತಿ ಮಾಡಿದ್ದರೆ ಮುಂದಿನ ವರ್ಷ ಅದನ್ನು ಸರಿದೂಗಿಸಲು ಸೂಚಿಸಿದ್ದೇನೆ ಎಂದರು.
ಅಧಿಕಾರಿಗಳು ನಿಮಗೆ ಸಹಕಾರ ನೀಡದ ಕಾರಣ ನೀವು ನಮ್ಮ ಬಳಿ ಬರುತ್ತೀರಿ. ನಿಮ್ಮ ವೈಯಕ್ತಿಕ ಸಮಸ್ಯೆ, ಏರಿಯಾ ಸಮಸ್ಯೆ ಹೊತ್ತು ತಂದಿದ್ದೀರಿ. ಎಲ್ಲರ ಸಮಸ್ಯೆಯನ್ನು ಆಲಿಸುತ್ತೇವೆ. ನಿಮ್ಮ ಅಹವಾಲುಗಳನ್ನು ನೋಂದಣಿ ಮಾಡಿಕೊಳ್ಳಿ. ನಿಮ್ಮ ಹೆಸರು, ಸಮಸ್ಯೆ ಹಾಗೂ ದೂರವಾಣಿ ಸಂಖ್ಯೆ ನಮೂದಿಸಿ. ನಿಮ್ಮ ಅಹವಾಲು ಬಗೆಹರಿಸಲು ಪ್ರತ್ಯೇಕ ತಂಡ ರಚಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ವಿಂಗಡಿಸಿ, ಅವುಗಳನ್ನು ಕಾನೂನು ವ್ಯಾಪ್ತಿಯಲ್ಲಿ ಬಗೆಹರಿಸುತ್ತೇವೆ. ನಿಮ್ಮ ದೂರವಾಣಿ ಸಂಖ್ಯೆಗೆ ಪಾಲಿಕೆ ಅಧಿಕಾರಿಗಳು ಸಂಪರ್ಕಿಸುತ್ತಾರೆ. ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. 2 ಸಾವಿರ ಕೋಟಿ ರೂ. ಮೌಲ್ಯದ ವೈಟ್ ಟ್ಯಾಪಿಂಗ್ ರಸ್ತೆಗಳ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಬೆಂಗಳೂರಿನಲ್ಲಿ ನಿತ್ಯ 55 ಲಕ್ಷ ವಾಹನ ಸಂಚಾರ ಮಾಡುತ್ತಿವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ತಳ್ಳುವ ಗಾಡಿಯಲ್ಲಿ ಮಾತ್ರ ಬೀದಿ ವ್ಯಾಪಾರಕ್ಕೆ ಅವಕಾಶ
ಶಾಸಕ ಅಶ್ವತ್ ನಾರಾಯಣ ಅವರು ಆಸ್ತಿ ತೆರಿಗೆ ಮತ್ತು ಪಾದಚಾರಿ ಮಾರ್ಗ ವಿಚಾರವಾಗಿ ಗಮನ ಸೆಳೆದರು. ಈ ವಿಚಾರವಾಗಿ ಹೈಕೋರ್ಟ್ ಆದೇಶ ಕೂಡ ಬಂದಿದೆ. ಆ ಆದೇಶ ಪಾಲನೆ ಆಗದಿದ್ದರೆ ಪಾಲಿಕೆ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಬಾರದು ಎಂದು ಹೇಳುವುದಿಲ್ಲ. ನೀವು ನೋಂದಣಿ ಮಾಡಿಸಿಕೊಂಡು, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಬೇಕು. ಪಾದಚಾರಿ ಮಾರ್ಗದಲ್ಲಿ ಅಂಗಡಿ ಹಾಕಿಕೊಂಡರೆ ಜನ ಸಾಮಾನ್ಯರು ಎಲ್ಲಿ ಓಡಾಡಬೇಕು? ಎಂದು ಪ್ರಶ್ನಿಸಿದರು.
ಇದೇ ವೇಳೆ ಮುಂದಿನ ತಿಂಗಳೊಳಗೆ ಕರ್ನಾಟಕ ಸ್ಲಂ ಬೋರ್ಡ್ ಮತ್ತು ರಾಜೀವ್ ಗಾಂಧಿ ವಸತಿ ನಿಗಮದಿಂದ 3,600 ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಹೇಳಿದರು.