ಕಾಂಗ್ರೆಸ್ ಸದಾ ಬಡವರ ಪರ ನುಡಿದಂತೆ ನಡೆದ ಪಕ್ಷ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಕಾಂಗ್ರೆಸ್ ಪಕ್ಷ ಸದಾ ಬಡವರ ಪರವಾಗಿದ್ದು, ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.
ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಮ್ಮ ಸರ್ಕಾರ ಬಡವರ ಪರವಾಗಿದ್ದು, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದೆ. ಅಧಿಕಾರಕ್ಕೆ ಬಂದ ಏಳು ತಿಂಗಳಲ್ಲೇ ಘೋಷಿಸಿದ್ದ ಎಲ್ಲಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ, ಇದು ನಮ್ಮ ಸರ್ಕಾರದ ಹೆಗ್ಗಳಿಕೆಯಾಗಿದೆ ಎಂದರು.
ಮೊದಲ ಹಂತದಲ್ಲಿ 55 ಜನರಿಗೆ ಹಕ್ಕುಪತ್ರ
ದೇಶದಲ್ಲಿ ಉಳುವವನೇ ಭೂ ಒಡೆಯ ಎಂಬ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ದಿಟ್ಟ ನಿರ್ಧಾರ ಕೈಗೊಂಡಿದ್ದು ನಮ್ಮ ಪಕ್ಷದ ಹೆಗ್ಗಳಿಕೆ. ಹಕ್ಕುಪತ್ರಕ್ಕಾಗಿ 600ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು, ಈ ಪೈಕಿ ಮೊದಲ ಹಂತದಲ್ಲಿ 55 ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ಈ ಹಕ್ಕು ಪತ್ರಗಳನ್ನು ಪಡೆದವರು ಇ- ಸ್ವತ್ತಿನಡಿ ಖಾತೆ ಮಾಡಿಸಿಕೊಳ್ಳಬೇಕೆಂದು ಫಲಾನುಭವಿಗಳಿಗೆ ಸಚಿವರು ಸಲಹೆ ನೀಡಿದರು.
ಸಮಾರಂಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸೇರಿದಂತೆ ವಿವಿಧ ಅಧಿಕಾರಿಗಳು, ಮತ್ತಿತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.