ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಂದವರ ಋಣ ಬಿಜೆಪಿ ತೀರಿಸಲಿದೆ: ಕೆ.ಎಸ್.ಈಶ್ವರಪ್ಪ
ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ, ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಮುನಿರತ್ನ ಅಕ್ರಮ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತ ಮಾಡುತ್ತೇವೆ. ಆರ್ ಆರ್ ನಗರ, ಶಿರಾ ಜೊತೆಗೆ ವಿಧಾನ ಪರಿಷತ್ ನ ಶಿಕ್ಷಕರು, ಪದವೀಧರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಮೈತ್ರಿ ಸರ್ಕಾರಕ್ಕೆ ಶಾಸಕರೆಲ್ಲ ರಾಜೀನಾಮೆ ನೀಡದೇ ಇದ್ದಿದ್ದರೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರಲಿಲ್ಲ. ಯಾವ ಶಾಸಕರು ರಾಜೀನಾಮೆ ಕೊಟ್ಟು ಬಂದಿದ್ದಾರೆಯೋ ಅವರ ಋಣ ತೀರಿಸುವ ಜವಾಬ್ದಾರಿ ನಮ್ಮದು. ಋಣ ತೀರಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ ಮಾಡಲಿದೆ ಈಶ್ವರಪ್ಪ ತಿಳಿಸಿದರು.
ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 2020-21ನೇ ಸಾಲಿಗೆ 44.86 ಲಕ್ಷ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದ್ದು, ಈ ವರ್ಷ 8.34 ಲಕ್ಷ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ 3ರಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5612.50 ಕಿ. ಮೀ ಹಂಚಿಕೆ ಮಾಡಲಾಗಿದೆ. ಉಳಿದ 24109.93 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗಳ ಪ್ರಸ್ತಾವನೆ ಕೇಂದ್ರ ಸರ್ಕಾರದ ಅನುಮೋದನೆಯಲ್ಲಿದೆ. ಅಂತರ್ಜಲ ಚೇತನ ಕಾರ್ಯಕ್ರಮ ಯೋಜನೆಯಡಿ ಶೇ. 65 ರಷ್ಟು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗೆ ಬಳಸಲಾಗುತ್ತಿದೆ ಎಂದರು.