ದೀಪಾವಳಿ ಹಬ್ಬ: ಪಟಾಕಿ ಮಾರಾಟಕ್ಕೂ ಷರತ್ತು
ಬೆಂಗಳೂರು: ದೀಪಾವಳಿ ಹಬ್ಬ (ನ. 14ರಿಂದ ನ. 17ರವರೆಗೆ) ಪ್ರಯುಕ್ತ ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ನ. 1ರಿಂದ 17ರವರೆಗೆ ಪಟಾಕಿ ಮಾರಾಟ ಮಾಡಬಹುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಕಾರಣ, ಹಬ್ಬದ ಆಚರಣೆಗೆ ಮಾರ್ಗಸೂಚಿ ಹೊರಡಿಸಿರುವ ಮುಖ್ಯ ಕಾರ್ಯದರ್ಶಿ, ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ಮಾರಾಟ ಮಳಿಗೆಗಳಲ್ಲಿ ಎರಡೂ ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಮಳಿಗೆಗಳ ಮಧ್ಯೆ 6 ಮೀಟರ್ ಅಂತರ ಇರಬೇಕು’ ಎಂದು ಸ್ಪಷ್ಟಪಡಿಸಿದ್ದಾರೆ.
ಪರವಾನಗಿ ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು. ಮಳಿಗೆಗಳ ಸುತ್ತ ನಿತ್ಯ ಸ್ಯಾನಿಟೈಸ್ ಮಾಡಬೇಕು. ಪಟಾಕಿ ಖರೀದಿಸಲು ಬರುವವರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು. ಕನಿಷ್ಠ 6 ಅಡಿ ಅಂತರ ಗುರುತಿಸಿ, ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು ಕಡ್ಡಾಯ ಎಂದೂ ಮಾರ್ಗಸೂಚಿಯಲ್ಲಿದೆ.
ಪಟಾಕಿ ಖರೀದಿ ವೇಳೆ ಜನದಟ್ಟಣೆ ಉಂಟಾಗದಂತೆ ನೋಡಿಕೊಳ್ಳಬೇಕು. ಜೊತೆಗೆ, ಸೋಂಕು ಹರಡದಂತೆ ತಡೆಯಲು ಕೇಂದ್ರ–ರಾಜ್ಯ ಸರ್ಕಾರ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿರುವ ಅಂಶಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ