ಕುಂದಾಪುರ: 14 ಮಂದಿ ಗುಣಮುಖ, ಎರಡು ದಿನದಲ್ಲಿ 59 ಮಂದಿ ಬಿಡುಗಡೆ

ಕುಂದಾಪುರ: ಕುಂದಾಪುರ ಸರ್ಕಾರಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 14 ಮಂದಿ ಕೊರೊನಾ ಸೋಂಕಿತರು ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು 177 ಸೋಂಕಿತರ ಪೈಕಿ 59 ಜನ ಗುಣಮುಖರಾಗಿ ಮನೆ ಸೇರಿದ್ದಾರೆ.

ಕುಂದಾಪುರ ಸಹಾಯಕ ಆಯುಕ್ತ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋ ಕೊರೊನಾ ಮುಕ್ತರಾದ ಅವರಿಗೆ ಗುಲಾಬಿ ಗಿಡಗಳನ್ನು ವಿತರಿಸುವ ಮೂಲಕ ವಿಶೇಷ ರೀತಿಯಲ್ಲಿ ಬೀಳ್ಕೊಟ್ಟರು.

ಈ ಆಸ್ಪತ್ರೆಯಲ್ಲಿ ಒಟ್ಟು 78 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಏಳನೇ ದಿನಕ್ಕೆ 3 ವರ್ಷ, 8 ವರ್ಷ ಮತ್ತು 14 ವರ್ಷದ ಮಕ್ಕಳು ಸಹಿತ ಒಟ್ಟು 14 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಅವರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇವರಲ್ಲಿ ಬಹುತೇಕ ಮಂದಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸಿದರು ಮತ್ತು ಸೋಂಕಿನ ಯಾವುದೇ ಲಕ್ಷಣಗಳಿಲ್ಲದವರಾಗಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!