ಚಕ್ರವರ್ತಿ ಸೂಲಿಬೆಲೆ ಭಾಷಣದ ವೇಳೆ ಕಪ್ಪು ಬಾವುಟ ಪ್ರದರ್ಶನ, ಕಲ್ಲು ತೂರಾಟ!
ಚಿಕ್ಕಮಗಳೂರು: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಚಿಕ್ಕಮಗಳೂರಿನಲ್ಲಿ ಭಾಷಣ ಪ್ರಾರಂಭಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿ ವಿರೋಧ ವ್ಯಕ್ತಪಡಿಸಿದರು.
ನಮೋ ಬ್ರೀಗೆಡ್ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ನಮೋಭಾರತ್ 2.0 ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದು ಸೂಲಿಬೆಲೆ ವಿರುದ್ಧ ಘೋಷಣೆಗಳನ್ನು ಕೂಗಿದ್ದರಿಂದ ಕಾರ್ಯಕ್ರಮದಲ್ಲಿ ಗೊಂದಲದ ವಾತವಾರಣ ನಿರ್ಮಾಣವಾಗಿತ್ತು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಮುಖಂಡರು ಘೋಷಣೆ ಕೂಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಭಾರತ ಮಾತಾ ಕೀ ಎಂದು ಘೋಷಣೆ ಕೂಗಿದರು. ಇದರಿಂದ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋಡ ನೋಡುತ್ತಿದ್ದಂತೆ ನಮೋ ಭಾರತ್ ಕಾರ್ಯಕ್ರಮ ಉದ್ವಿಗ್ನತೆ ಸ್ವರೂಪ ಪಡೆದುಕೊಂಡಿತ್ತು.
ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಲು ಮುಂದಾದರು. ಅಲ್ಲದೆ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ 10 ರಿಂದ 15 ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.