ಬನ್ನಂಜೆ ರಾಜನ ಸಹಚರ, ಬಾರ್ ಮಾಲೀಕನ ಗುಂಡಿಕ್ಕಿ ಹತ್ಯೆ
ಬೆಂಗಳೂರು: ಬ್ರಿಗೇಡ್ ರಸ್ತೆಯ ಡ್ಯೂಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ (45) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗುಂಡೇಟಿನಿಂದ ಗಾಯಗೊಂಡಿದ್ದ ಮನೀಶ್ ರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
ಕೊಪ್ಪದ ಮನೀಶ್ ಶೆಟ್ಟಿ, ಕೆಲ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಬಾರ್ ತೆರೆದಿದ್ದ .
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್, ‘ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಬಾರ್ ಮುಂಭಾಗದಲ್ಲೇ ಮನೀಶ್ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ’ ಎಂದು ಮಾಹಿತಿ ನೀಡಿದರು.
ಮನೀಶ್ ಶೆಟ್ಟಿಗೆ ಭೂಗತ ಪಾತಕಿ ಬನ್ನಂಜೆ ರಾಜನ ಸಂಪರ್ಕವಿತ್ತು ಎನ್ನಲಾಗಿದೆ. ಹಿಂದೆ ಚೆಮ್ಮನ್ನೂರು ಜುವ್ಯೆಲ್ಲರ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಈತನ ಮೇಲೆ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿತ್ತು.
ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.