ಉಡುಪಿ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಉಡುಪಿ, ಫೆ.28: ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ನಗರದ ಬ್ರಹ್ಮಗಿರಿಯಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮುಖಂಡರಾದ ರಾಜೇಶ್ ಕಾವೇರಿ, ವೀಣಾ ಶೆಟ್ಟಿ, ಮುಟ್ಲುಪಾಡಿ ಸತೀಶ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಮುಖಂಡರಾದ ವಿಖ್ಯಾತ್ ಶೆಟ್ಟಿ, ನಯನ ಗಣೇಶ್, ಜಿತೇಂದ್ರ ಶೆಟ್ಟಿ ಮೊದಲಾದವರು ಭಾಗವಹಿಸಿದ್ದು, ಕಾಂಗ್ರೆಸ್ ಭವನಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.
ಬ್ರಹ್ಮಗಿರಿ ಸರ್ಕಲ್ ಹಾಗೂ ಕಾಂಗ್ರೆಸ್ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕಾಂಗ್ರೆಸ್ ಕಾರ್ಯಕರ್ತರಿಂದ ಜಮಾವಣೆ:
ಬಿಜೆಪಿಯ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಕಾಂಗ್ರೆಸ್ ಭವನದ ಎದುರು ಜಮಾಯಿಸಿದರು.
ಬಳಿಕ ಕಾಂಗ್ರೆಸ್ ಪರ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಕೃಷ್ಣಮೂರ್ತಿ ಆಚಾರ್ಯ, ವರೋನಿಕಾ ಕರ್ನೆಲಿಯೊ, ಸದಾಶಿವ ಅಮೀನ್ ಕಟ್ಟೆಗುಡ್ಡೆ, ಸುರೇಶ್ ಶೆಟ್ಟಿ ಬನ್ನಂಜೆ ಮೊದಲಾದವರು ಉಪಸ್ಥಿತರಿದ್ದರು.