ಜಾತಿ ಗಣತಿ ವರದಿ ಬಹಿರಂಗ ನಿರ್ಬಂಧಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌. ಕಾಂತರಾಜು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ವರದಿ (ಜಾತಿ ಗಣತಿ) ಸಲ್ಲಿಕೆಯನ್ನು ತಡೆಯಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತಂತೆ ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿ ಓದನಹಳ್ಳಿಯ ವಕೀಲ ಒ.ಕೆ.ರಘು ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು, ‘ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ರಘು ಪರ ವಕೀಲ ಅಭಿಷೇಕ್ ಕುಮಾ‌ರ್ ಅವರು, ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಗುರುವಾರ ಮನವಿ ಮಾಡಿದರು.

‘ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವರದಿ ಮಂಡಿಸುತ್ತಿರುವುದರ ಹಿಂದೆ ರಾಜಕೀಯ ದುರುದ್ದೇಶಗಳು ಅಡಗಿವೆ. ಆದ್ದರಿಂದ, ವರದಿ ಬಹಿರಂಗವಾಗಲು ಅವಕಾಶ ನೀಡದಂತೆ ನಿರ್ಬಂಧಿಸ ಬೇಕು. ಇಂದೇ ಮಧ್ಯಂತರ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರ್ಜಿಯನ್ನು ನಾಳೆ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಹೇಳಿದೆ.

Leave a Reply

Your email address will not be published. Required fields are marked *

error: Content is protected !!