5, 8, 9 ತರಗತಿ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್ ಎಕ್ಸಾಂ ಸುತ್ತೋಲೆಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಹೀಗಾಗಿ ಈ ಬಾರಿ ಈ ತರಗತಿಗಳಿಗೆ ಬೋರ್ಡ್ ಎಕ್ಸಾಂ ಇರುವುದಿಲ್ಲ.
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.
9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ವಾದವಾಗಿತ್ತು.