ಸಂವಿಧಾನದ ಬಗ್ಗೆ ಕೀಳಾಗಿ ಮಾತನಾಡುವ ಸಂಸದ ಅನಂತ್ ಕುಮಾರ್ರನ್ನು ಪಕ್ಷದಿಂದ ಹೊರಹಾಕಲಿ: ಡಾ.ಜಿ.ಪರಮೇಶ್ವರ್
ಬೆಂಗಳೂರು: ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ಮೋದಿ ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಅವರ ಪಕ್ಷದ ಸಂಸದರೊಬ್ಬರು ಪದೇ ಪದೇ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.
ಅನಂತಕುಮಾರ್ ಹೆಗಡೆ ಅವರ ಹೇಳಿಕೆಯಿಂದ ದೂರ ಇದ್ದೇವೆ ಎಂದು ಬಿಜೆಪಿ ನಾಯಕರು ಹೇಳಿದರೆ ಸಾಲದು, ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು. ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸರಿಯಾದ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು. ಆದರೆ, ಚುನಾವಣೆ ನಂತರ ವಾಸ್ತವಾಂಶ ಏನೆಂಬುದು ಗೊತ್ತಾಗಲಿದೆ. ಸಚಿವ ಎಚ್.ಸಿ.ಮಹದೇವಪ್ಪ ಅವರ ಸ್ಪರ್ಧೆಯ ಮಾತುಗಳು ಕೇಳಿಬರುತ್ತಿವೆ. ತನಗೆ ಟಿಕೆಟ್ ಬೇಡ, ಮಗನಿಗೆ ನೀಡುವಂತೆ ಮಹದೇವಪ್ಪ ಅವರು ಹೇಳುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು.