ಉಡುಪಿ: ಬೇಸಿಗೆಯಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸಿದ್ಧತೆ ಕೈಗೊಳ್ಳಿ- ಯಶ್ಪಾಲ್ ಸುವರ್ಣ

ಉಡುಪಿ: ಮುಂಬರುವ ಬೇಸಿಗೆ ಅವಧಿಯಲ್ಲಿ ಉಡುಪಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆಯಾಗದಂತೆ ಈಗಲೇ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದ್ದಾರೆ.

ಉಡುಪಿ ನಗರಸಭೆ ಹಾಗೂ ತಾಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆ, ಹಕ್ಕು ಪತ್ರ ಮಂಜೂರು, ಸಾಮಾಜಿಕ ಭದ್ರತೆ ಯೋಜನೆಗಳ ಸಹಿತ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕಡತಗಳ ಶೀಘ್ರ ವಿಲೇವಾರಿಗೆ ಸೂಚನೆ ನೀಡಿದರು.

ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ನೀರಿನ ಮೂಲಗಳ ಸಮರ್ಪಕ ನಿರ್ವಹಣೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಮುಂತಾದ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ತಾಲೂಕಿನಾದ್ಯಂತ ಬಾಕಿ ಇರುವ ಹಕ್ಕುಪತ್ರಗಳ ವಿತರಣೆ ಹಾಗೂ ಸರಕಾರಿ ಭೂಮಿಗಳನ್ನು ಗುರುತಿಸಿ ಸಂರಕ್ಷಿಸುವ ನಿಟ್ಟಿನಲ್ಲಿ ಬೋರ್ಡ್ ಅಳವಡಿಕೆ ಹಾಗೂ ಸಾರ್ವಜನಿಕರ ಭೇಟಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಸಮಯ ನಿಗದಿಪಡಿಸಿ ಕಚೇರಿಯಲ್ಲಿ ಭೇಟಿಯ ಸಮಯದ ಮಾಹಿತಿ ನೀಡುವಂತೆ ಹೇಳಿದರು.

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಜಾತಿ ಆದಾಯ ಪ್ರಮಾಣ ಪತ್ರ ನೀಡಲು ವಿನಾಕಾರಣ ವಿಳಂಬ ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಉಡುಪಿ ತಹಶೀಲ್ದಾರ್ ಗುರುರಾಜ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೇವರಾಜ ಎಂ.ಹಿತ್ತಲಕೊಪ್ಪ, ನಗರ ಸಭಾ ಸದಸ್ಯರು, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!