ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ3.75 ರಷ್ಟು ಹೆಚ್ಚಳ
ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 38.75 ರಿಂದ ಶೇ. 42.5ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಹೇಳಲಾಗಿದೆ.
ದಿನಾಂಕ 01/01/2024ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗು ವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು.