CAA ಗೆ ಸುಪ್ರೀಂ ತಡೆ ಇಲ್ಲ: ಕಾಯಿದೆ ಜಾರಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರಕ್ಕೆ 3ವಾರ ಕಾಲಾವಕಾಶ

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯಿದೆಗೆ ತಡೆ ಹೇರಲು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ ಈ ಕಾಯಿದೆ ಜಾರಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ಈ ವಿವಾದಿತ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 237 ಅರ್ಜಿಗಳ ವಿಚಾರಣೆಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ಪೀಠ ನಡೆಸಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರಾ ಸಹ ಇದ್ದಾರೆ.

ಸಿಎಎ ಪ್ರಶ್ನಿಸಿ ಅರ್ಜಿ ಸಲ್ಲಿಸಿದವರಲ್ಲಿ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌, ಡೆಮಾಕ್ರೆಟಿಕ್‌ ಯುತ್‌ ಫೆಡರೇಷನ್‌ ಆಫ್‌ ಇಂಡಿಯಾ, ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌, ತೃಣಮೂಲ ನಾಯಕಿ ಮಹುವಾ ಮೊಯಿತ್ರಾ ಮತ್ತು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್‌ ಉವೈಸಿ ಸೇರಿದ್ದಾರೆ.

ಕಾನೂನು ಜಾರಿಗೆ ತಡೆ ಹೇರಬೇಕು, ಈ ಕಾನೂನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯಕಾರಿ ಧೋರಣೆ ಹೊಂದಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

“ಸಿಎಎ ಯಾವುದೇ ವ್ಯಕ್ತಿಯ ಪೌರತ್ವವನ್ನು ಸೆಳೆಯುವುದಿಲ್ಲ,” ಎಂದು ಕೇಂದ್ರದ ಪರ ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಇಂದಿನ ವಿಚಾರಣೆ ವೇಳೆ ಹೇಳಿದರು.

ಕಾಯಿದೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಸಮಯಾವಕಾಶವನ್ನೂ ಅವರು ಕೋರಿದ್ದರು.

Leave a Reply

Your email address will not be published. Required fields are marked *

error: Content is protected !!