ಸದೃಢ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡಬೇಕು: ಸಿಇಓ ಪ್ರತೀಕ್ ಬಾಯಲ್

ಉಡುಪಿ, ಮಾ.19: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬ ಅರ್ಹ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರೊಂದಿಗೆ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಏಪ್ರಿಲ್ 26 ರಂದು ನಡೆಯಲಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಅರ್ಹ ಪ್ರತಿಯೊಬ್ಬ ಮತದಾರರು ಮತದಾನ ಮಾಡುವುದರೊಂದಿಗೆ ಜಿಲ್ಲೆಯಲ್ಲಿ ಪ್ರತಿಶತ 100 ರಷ್ಟು ಮತದಾನ ಮಾಡಬೇಕು. ಮತದಾರರಲ್ಲಿ ಮತದಾನ ಕುರಿತು ವ್ಯವಸ್ಥಿತ ಶಿಕ್ಷಣದ ಅರಿವನ್ನು ಅಧಿಕಾರಿಗಳು ಪ್ರತಿಯೊಬ್ಬರಿಗೂ ಮೂಡಿಸಬೇಕು ಎಂದರು.

ಮತದಾನ ಕೇಂದ್ರಗಳಿಗೆ ಮತದಾನಕ್ಕೆ ಬಂದಾಗ ಅವರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಕುರಿತು ವಿಶೇಷ ಗಮನ ಹರಿಸಬೇಕು. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಮಹಿಳೆಯರಿಗೆ ಮತದಾನ ಮಾಡಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಈ ಬಾರಿ 85 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಬೇಕಾಗಿದೆ. 85 ವರ್ಷ ಮೇಲ್ಪಟ್ಟ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಲು ಸಾಧ್ಯವಾಗದೆ ಇರುವ ಪ್ರತಿಯೊಬ್ಬರಿಗೂ ಅವರ ವಾಸ್ತವ್ಯ ಸ್ಥಳದಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಬೇಕು ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇಕಡವಾರು ಮತದಾನ ಕಡಿಮೆ ಆಗಿರುವ ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ಶೇಕಡವಾರು ಮತದಾನ ಹೆಚ್ಚಿಸಲು ಹಲವಾರು ಸ್ವೀಪ್ ಚಟುವಟಿಕೆ ಕಾರ್ಯಕ್ರಮಗಳನ್ನು ಹಾಗೂ ಮಾಹಿತಿ ಕಾರ್ಯಕ್ರಮಗಳನ್ನುಆಯೋಜಿಸಲು ಕ್ರಮವಹಿಸಲು ವಿಶೇಷ ಕಾಳಜಿ ವಹಿಸಬೇಕು ಎಂದರು.

ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೇ ನಿರ್ಭೀತರಾಗಿ ಮತ ಚಲಾಯಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಬಿ.ಎಲ್.ಓ ಗಳು ಪ್ರತಿಯೊಬ್ಬ ಮತದಾರರಿಗೂ ಮತದಾನ ಮಾಡಲು ಅನುಕೂಲವಾಗುವ ರೀತಿಯಲ್ಲಿ ಮತದಾನ ಕ್ರಮ ಸಂಖ್ಯೆಯ ಚೀಟಿಯನ್ನು ಮನೆಮನೆಗೂ ವಿತರಿಸಬೇಕು ಎಂದ ಅವರು, ಮತದಾನ ಯಂತ್ರದ ಬಳಕೆಯ ಬಗ್ಗೆಯೂ ಅರಿವು ಮೂಡಿಸಬೇಕು ಎಂದರು.

ಯುವ ಮತದಾರರನ್ನು ಗುರುತಿಸಿ ಅವರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಮತದಾನದ ಮಹತ್ವ ವನ್ನು ಪ್ರತಿಯೊಬ್ಬರು ತಿಳಿದುಕೊಂಡು ಮತದಾನದಲ್ಲಿ ಪಾಲ್ಗೊಳುವಂತೆ ಮಾಡಬೇಕು ಎಂದರು. ಜಿಲ್ಲೆಯ ಪ್ರತಿಯೊಬ್ಬ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂಬುದನ್ನು ವೆಬ್‌ಸೈಟ್ https://electoralsearch.eci.gov.in/ಅನ್ನು ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ಒಂದು ವೇಳೆ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದಲ್ಲಿ ವೆಬ್‌ಸೈಟ್ https://voterportal.eci.gov.in/ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನಿರ್ದೇಶಕಿ ಶ್ಯಾಮಲಾ ಸಿ.ಕೆ, ಕಾರ್ಮಿಕ ಇಲಾಖೆಯ ಅಧಿಕಾರಿ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಡಿ.ಡಿ.ಪಿ.ಯು ಮಾರುತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!