ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 6 ದಿನ ಇಡಿ ವಶಕ್ಕೆ
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ 6 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.
ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿತ್ತು. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ, ಕೆಲ ಗಂಟೆಗಳ ಕಾಲ ಕೇಜ್ರಿವಾಲ್ ಅವರನ್ನು ವಿಚಾರಣೆ ಒಳಪಡಿಸಿ, ಬಳಿಕ ಬಂಧಿಸಿತ್ತು.
ಇಡಿ ಅಧಿಕಾರಿಗಳು ಇಂದು ಮಧ್ಯಾಹ್ನ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 10 ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿದರು.
ಆರೋಪಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು, ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಇಡಿ ಪರವಾಗಿ ಎಎಸ್ಜಿ ಎಸ್ವಿ ರಾಜು ಅವರು ವಾದ ಮಂಡಿಸಿದರೆ, ಕೇಜ್ರಿವಾಲ್ ಅವರ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದರು.
ಈಗ ರದ್ದಾದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿದೆ.