ಉಡುಪಿ/ದ.ಕ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ
ಉಡುಪಿ: ಜಿಲ್ಲೆಯಾದ್ಯಂತ ಈದುಲ್ ಫಿತ್ರ್ ಅನ್ನು ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಉಡುಪಿ ನಗರ ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.
ಹಶಿಮಿ ಮಸೀದಿಯು ಪ್ರೀತಿ/ಶಾಂತಿ ಮತ್ತು ಮತದಾನದ ಮಹತ್ವಕ್ಕಾಗಿ ಕರೆ ನೀಡುವ ಈದ್ ಅನ್ನು ಆಚರಿಸಿತು
ಹಾಶಿಮಿ ಮಸೀದಿ, ನಾಯರ್ಕೆರೆ. ಉಡುಪಿಯಲ್ಲಿ ನಿನ್ನೆ ಈದ್ ಆಚರಿಸಲಾಯಿತು. ಈದ್ ನಮಾಝ್ ನೇತೃತ್ವವನ್ನು ಮೌಲಾನಾ ಒಬೈದುರ್ ರೆಹಮಾನ್ ನದ್ವಿ ವಹಿಸಿ, ಮತದಾನದ ಹಕ್ಕಿನ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಸಮುದಾಯಗಳ ನಡುವೆ ಶಾಂತಿ ಮತ್ತು ಪ್ರೀತಿಗಾಗಿ ಕರೆ ನೀಡಿದರು.
ಈದ್ ನಮಾಝ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಈದ್ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.
ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು.
ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು.
ಅಲ್ಲದೆ ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು. ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಮಂಗಳೂರು, ಎ.10: ಪವಿತ್ರ ರಮಝಾನ್‌ನ 29 ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು.
ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು.
ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದರು. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು.