ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್ಡಿಎಗೆ ಸಾಕಷ್ಟು ಸೀಟು ಬರಲ್ಲ- ಸಿಎಂ ಸಿದ್ದರಾಮಯ್ಯ
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದಿದ್ದರೂ, ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್ಡಿಎಗೆ ಸಾಕಷ್ಟು ಸ್ಥಾನಗಳು ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ನ ಲೋಕಸಭಾ ಚುನಾವಣೆಯ ಭವಿಷ್ಯದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಕರ್ನಾಟಕದಲ್ಲಿ ತಮ್ಮ ಪಕ್ಷ 15-20 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಿಟಿಐ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇವಲ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸದೆ ರಾಜ್ಯ ಸರ್ಕಾರದಲ್ಲಿ ತಮ್ಮ ಸ್ಥಾನದ ಬಗ್ಗೆ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳ ನಂತರ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡಬೇಕೇ ಎಂಬ ಊಹಾಪೋಹಗಳ ಕುರಿತು ಮಾತನಾಡಿದರು. ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದರು.
ಇದು ಹೈಕಮಾಂಡ್ ನಿರ್ಧಾರವನ್ನು ಅವಲಂಬಿಸಿರುತ್ತದೆ. ಹೈಕಮಾಂಡ್ ನಿರ್ಧರಿಸಿದರೆ ನಾನೇ ಮುಂದುವರಿಯುತ್ತೇನೆ. ಇಲ್ಲವಾದಲ್ಲಿ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ನಾಲ್ಕು ವರ್ಷಗಳ ನಂತರ ಚುನಾವಣಾ ರಾಜಕೀಯದಲ್ಲಿ ಉಳಿಯುವುದಿಲ್ಲ ಆದರೆ ಸಕ್ರಿಯ ರಾಜಕಾರಣದಲ್ಲಿ ಉಳಿಯುತ್ತೇನೆ ಎಂದು ಪುನರುಚ್ಚರಿಸಿದರು.
ಕಳೆದ ವರ್ಷ ಮೇನಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಎರಡೂವರೆ ವರ್ಷಗಳ ನಂತರ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಆ ಮೂಲಕ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಶಿವಕುಮಾರ್ ಅವರಿಗೆ ಸರ್ಕಾರದ ನೇತೃತ್ವ ವಹಿಸಲು ಸಿದ್ದರಾಮಯ್ಯ ದಾರಿ ಮಾಡಿಕೊಡುವರೆ ಎಂಬ ಚರ್ಚೆಗಳು ಆಗಾಗ್ಗೆ ನಡೆಯುತ್ತಲೇ ಇವೆ.