ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ- ಕಾಂಗ್ರೆಸ್ 15-17 ಸ್ಥಾನಗಳಲ್ಲಿ ಗೆಲುವು!

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಈ ಮಧ್ಯೆ ಕಾಂಗ್ರೆಸ್ ಏಕಾಂಕಿಯಾಗಿ ಹೋರಾಟಕ್ಕೆ ಮುಂದಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಎದುರು ನೋಡುತ್ತಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಕಾಂಗ್ರೆಸ್ ಒಂದೇ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಕೂಡ ಒಂದೇ ಒಂದು ಸ್ಥಾನ ಗೆದ್ದುಕೊಂಡಿತ್ತು. ಪಕ್ಷೇತರ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದರು.

ಕಾಂಗ್ರೆಸ್ ಈ ಬಾರಿ ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲಬೇಕೆಂದು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದ್ದು, ಮತ್ತೊಂದೆಡೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಎಲ್ಲ 28 ಕ್ಷೇತ್ರಗಳಲ್ಲೂ ಗೆಲ್ಲುವ ಕನಸು ಕಾಣುತ್ತಿದೆ.

ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಹುತೇಕ ನಿಖರ ಅಂಕಿ ಅಂಶ ನೀಡಿದ್ದ ಲೋಕ್‌ ಪೋಲ್‌ ಸಮೀಕ್ಷೆಯು ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗೆಲ್ಲಲಿವೆ ಎನ್ನುವುದನ್ನು ಹೇಳಿದೆ.

ಲೋಕ್ ಪೋಲ್ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ 15-17 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಬಿಜೆಪಿ ಕೇವಲ 11 ರಿಂದ 13 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ

ಕಳೆದ ಬಾರಿಯಂತೆ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಗೆಲ್ಲುವ ಕನಸು ಕಾಣುತ್ತಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿಯೇ ಈ ಬಾರಿಯೂ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದೆ. ಇತ್ತ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಿರುವ ಕಾಂಗ್ರೆಸ್, ತನ್ನ ಗ್ಯಾರಂಟಿ ಯೋಜನೆಗಳ್ನು ಜನರ ಮುಂದಿಟ್ಟು ಮತಯಾಚನೆ ನಡೆಸುತ್ತಿದೆ.

28 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!