ಸಾವಿರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ಪ್ರಕರಣ- ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ!
ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು ತಂಡ ವಿಚಾರಣೆಯನ್ನು ಇಂದು ಭಾನುವಾರವೇ ಆರಂಭಿಸಲಿದೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, ಎಸ್ ಐಟಿ ಇನ್ನು ಕೆಲವೇ ಹೊತ್ತಿನಲ್ಲಿ ತನಿಖೆ ಆರಂಭಿಸಲಿದೆ. ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ಜಾರಿ ಮಾಡುವುದು ಅಥವಾ ಬಿಡುವುದು ಎಸ್ ಐಟಿಗೆ ಬಿಟ್ಟ ತೀರ್ಮಾನ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಯಾವುದೇ ಹಸ್ತಕ್ಷೇಪವಿಲ್ಲದೆ ತನಿಖೆ ನಡೆಯಲಿದೆ ಎಂದರು. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಕೂಡ ಇದೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದರು.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.
ಪ್ರಜ್ವಲ್ ರೇವಣ್ಣ ಜರ್ಮನಿಗೆ?: ಒಂದೆಡೆ ವಿಡಿಯೋ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ ರಚಿಸುತ್ತಿದ್ದಂತೆ, ಅತ್ತ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನದಿಂದ ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಹೋಗಿದ್ದಾರೆ ಎನ್ನಲಾಗಿದೆ. ಆದರೆ ಅವರು ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ವಿದೇಶಕ್ಕೆ ಹೋದರಾ ಅಥವಾ ತನಿಖೆಗೆ ವಿಶೇಷ ತಂಡ ರಚನೆ ಆಗುತ್ತಿದೆ ಎಂದು ತಿಳಿದು ಹೋದರಾ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.