ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಸಹಿಸಲಾಗದು, ನಿರ್ದಾಕ್ಷಿಣ್ಯ ಕ್ರಮ- ಕಿಶೋರ್ ಕುಮಾರ್

Oplus_131072

ಉಡುಪಿ: ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿದೆ. ಈಗಾಗಲೇ ಚುನಾವಣಾ ಕೆಲಸ ಕಾರ್ಯಗಳು ವೇಗ ಪಡೆದಿವೆ. ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಯಾವುದೇ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಅಂತಹ ಸನ್ನಿವೇಶದಲ್ಲಿ ಪಕ್ಷದ ಚೌಕಟ್ಟಿನೊಳಗೆ ಸೂಕ್ತ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಕಿಶೋರ್ ಕುಮಾರ್ ಹೇಳಿದ್ದಾರೆ.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣೆ ಮತ್ತು ವಿಧಾನಪರಿಷತ್ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದರು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಅತ್ಯಂತ ಹುಮ್ಮಸ್ಸಿನಿಂದ ತೊಡಗಿಸಿಕೊಂಡಿದ್ದು  ಪಕ್ಷದ ಅಭ್ಯರ್ಥಿ ಕೋಟರವರು ಗರಿಷ್ಠ ಅಂತರಗಳ ಮತದಿಂದ ಗೆಲ್ಲುವ ನಿರೀಕ್ಷೆ ಇದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣವನ್ನು ಪಡೆದು ಮುಖ್ಯ ಶಿಕ್ಷಕನಾಗಿ ಸೇವೆ ಸಲ್ಲಿಸಿ, ಪ್ರಸಕ್ತ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾಗಿರುವ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ  ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಮಾಜಿ ಸಚಿವ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಮೋದ್ ಮಧ್ವರಾಜ್ ಮಾತನಾಡಿ ಲೋಕಸಭಾ ಚುನಾವಣೆಗೆ ಪಕ್ಷ ಒಳ್ಳೆಯ ಅಭ್ಯರ್ಥಿಯನ್ನು ನೀಡಿದ್ದು ಪಕ್ಷದ ಸಮಸ್ತ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿದಿದ್ದಾರೆ. ಸರಳ ಸಜ್ಜನಿಕೆಯ ಅನುಭವಿ ರಾಜಕಾರಣಿ ಕೋಟರವರ ಗೆಲುವು ನಿಶ್ಚಿತ. ಅಪಾರ ಶ್ರದ್ಧೆ ಮತ್ತು ಕಾರ್ಯ ತತ್ಪರತೆಯಿಂದ ಅವರು ಭವಿಷ್ಯದಲ್ಲಿ ಅತ್ಯುನ್ನತ ಸ್ಥಾನವನ್ನು ಅಲಂಕರಿಸಲಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವ ತತ್ವ ಸಿದ್ದಾಂತವನ್ನು ಮೆಚ್ಚಿ ನಾನು ಬಿಜೆಪಿಗೆ ಸೇರ್ಪಡೆಗೊಂಡವನು. ಪಕ್ಷದಲ್ಲಿ ಅಂತಹ ಉದಾತ್ತ ತತ್ವಕ್ಕೆ ಎಂದೂ ಘಾಸಿಯಾಗದು ಎಂಬುದು ನನ್ನ ನಂಬಿಕೆ. ವಿಧಾನ ಪರಿಷತ್ ಚುನಾವಣೆಯ ಎರಡೂ ಅಭ್ಯರ್ಥಿಗಳ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸೋಣ ಎಂದರು.

Leave a Reply

Your email address will not be published. Required fields are marked *

error: Content is protected !!