ಯುವಜನತೆಯ ಸಮಸ್ಯೆಗಳ ಪರಿಹಾರಕ್ಕಾಗಿ ಪರಿಷತ್‌ನಲ್ಲಿ ಅವರ ಧ್ವನಿಯಾಗಿ ಕೆಲಸ ಮಾಡುತ್ತೇನೆ-ಧನಂಜಯ್ ಸರ್ಜಿ
ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆ ಶೂನ್ಯ. ಮೂಲಭೂತ ಸೌಕರ್ಯಗಳನ್ನು ನೀಡದೆ ಅನುದಾನಿತ ಶಾಲೆಗಳನ್ನು ಮುಚ್ಚುವ ಹುನ್ನಾರ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿ ಬೋಜೆಗೌಡ ಹೇಳಿದ್ದಾರೆ.
ಉಡುಪಿ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನಿತ ಶಾಲಾ ಶಿಕ್ಷಕರಿಗೆ ಕಳೆದ ಮೂರು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಈ ಶಾಲೆಗಳಿಗೆ ಶಿಕ್ಷಕರ ನೇಮಕ ಮಾಡುತ್ತಿಲ್ಲ. ಆದುದರಿಂದ ಮುಂದಿನ ದಿನಗಳಲ್ಲಿ ಅನುದಾನಿತ ಶಾಲೆಗಳ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದರಲ್ಲಿ ಸರಕಾರದ ಪಾತ್ರ ಏನು ಇಲ್ಲ. ಹಾಗಾಗಿ ಈ ಯೋಜನೆಯನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು. ಕನ್ನಡವನ್ನು ಆಡಳಿತ ಭಾಷೆಯನ್ನಾಗಿಸುವ ಮೊದಲು ರಾಜ್ಯ ಸರಕಾರ ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಅವರು ತಿಳಿಸಿದರು.
ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ ಮಾತನಾಡಿ, ಇಂದು ಯುವಜನತೆ ನಿರುದ್ಯೋಗ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಆದುದರಿಂದ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ ಹೆಚ್ಟಿನ ಒತ್ತು ನೀಡಲಾಗುವುದು. ಕ್ಷೇತ್ರದ ಯುವಜನತೆಯ ಸಮಸ್ಯೆಗಳ ಪರಿಹಾರಕ್ಕಾಗಿ ವಿಧಾನ ಪರಿಷತ್‌ನಲ್ಲಿ ಅವರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್ ಸುವರ್ಣ, ಅರುಣ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಬಿಜೆಪಿ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಹೆರ್ಗ ದಿನಕರ ಶೆಟ್ಟಿ, ಹರಿಕೃಷ್ಣ, ಅಶೋಕ್ ಮೂರ್ತಿ, ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರು ರತ್ನಾಕರ್ ಹೆಗ್ಡೆ, ಗೀತಾಂಜಲಿ ಸುವರ್ಣ, ಮುಟ್ಲುಪಾಡಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.