ನೈರುತ್ಯದ ಎರಡು ಕ್ಷೇತ್ರದಲ್ಲೂ ದೊಡ್ಡ ಅಂತರದಲ್ಲಿ ನಮ್ಮದೇ ಗೆಲುವು- ಬಿ.ವೈ. ವಿಜಯೇಂದ್ರ

ಉಡುಪಿ, ಮೇ 28: ಮಾಜಿ ಶಾಸಕ ರಘುಪತಿ ಭಟ್‌ಗೆ ನಮ್ಮ ಪಕ್ಷ ಅಥವಾ ಸಂಘಟನೆಯಿಂದ ಯಾವುದೇ ರೀತಿಯ ಅನ್ಯಾಯ ಆಗಿಲ್ಲ. ಅನೇಕ ಅವಕಾಶಗಳು ಸಿಕ್ಕಿದೆ. ಅದನ್ನು ಅವರು ಬಳಸಿಕೊಂಡಿದ್ದಾರೆ ಮತ್ತು ಕೆಲವು ಬಾರಿ ಎಡವಿದ್ದಾರೆ. ಯಾವುದೋ ಕಾರಣಕ್ಕೆ ಅವಕಾಶ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರನ್ನು, ಯಡಿಯೂರಪ್ಪ ಅವರನ್ನು ಟೀಕೆ ಮಾಡುವುದು ಒಪ್ಪಲು ಸಾಧ್ಯವಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಉಡುಪಿಯ ಹೋಟೆಲ್ ಕಿದಿಯೂರು – ಮಾಧವ ಕೃಷ್ಣ ಸಭಾಂಗಣದಲ್ಲಿ ಸೋಮವಾರ ನಡೆದ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಯಡಿಯೂರಪ್ಪ ಸಾಕಷ್ಟು ಪರಿಶ್ರಮ ಪಟ್ಟು ನಗರಕ್ಕೆ ಸೀಮಿತವಾಗಿದ್ದ ಪಕ್ಷವನ್ನು ಹಳ್ಳಿಹಳ್ಳಿಗಳಿಗೆ ವಿಸ್ತಾರ ಮಾಡಿದ್ದಾರೆ. ಪಕ್ಷ ಕಟ್ಟಲು ಯಡಿಯೂರಪ್ಪ ಅವರ ಶ್ರಮ ಅಪಾರವಾಗಿದೆ. ಆ ಕಾರಣದಿಂದ ಪಕ್ಷ ಇಷ್ಟು ಎತ್ತರಕ್ಕೆ ಬೆಳೆದಿದೆ. ಪಕ್ಷದ ಒಮ್ಮತ ನಿರ್ಧಾರದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅದನ್ನು ಒಪ್ಪದವರು ದುಸ್ಸಹಾಸಕ್ಕೆ ಕೈ ಹಾಕಿದ್ದಾರೆ. ಆದರೆ ಬಿಜೆಪಿ ತನ್ನ ಕಾರ್ಯಕತರು ಹಾಗೂ ಸಂಘಟನೆ ಶಕ್ತಿಯಿಂದ ನೈರುತ್ಯದ ಎರಡೂ ಕ್ಷೇತ್ರದಲ್ಲೂ ದೊಡ್ಡ ಅಂತರದಲ್ಲಿ ಗೆಲವು ಸಾಧಿಸಲಿದೆ. ಇದನ್ನು ಯಾರಿಗೂ ತಪ್ಪಿಸಲು ಸಾಧ್ಯವಿಲ್ಲ ಎಂದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮಾತನಾಡಿದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಅರುಣ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಮೆಂಡನ್, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!