ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಕ್ಷೀಣಗೊಂಡಿತ್ತು, ಈಗ ಮತ್ತೆ ಮಾರುತಗಳು ಕರಾವಳಿ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಹಿನ್ನಲೆಯಲ್ಲಿ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 21ರಿಂದ 23 ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಮತ್ತೆ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಬಿರುಗಾಳಿ 40 ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ 30 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಅಲ್ಲಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರವಿವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ 9 ಸೆಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗೇಸೊಪ್ಪದಲ್ಲಿ, ಗೋಕರ್ಣ ಮತ್ತು ಅಂಕೋಲಾದಲ್ಲಿ ಮತ್ತು ಗದಗದಲ್ಲಿ ತಲಾ 5 ಸೆಮೀ ಮಳೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿ, ಹಳಿಯಾಳ, ಶಿರಾಲಿ, ಬೆಳಗಾವಿ ಜಿಲ್ಲೆಯ ಸಂಕೇಶ್ವರ, ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ತಲಾ 4 ಸೆಮೀ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನೈಋತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿದ್ದು ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ನಿನ್ನೆ ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ರಾಜವೇಲ್ ಮಾಣಿಕ್ಕಂ ಹೇಳಿದ್ದಾರೆ.