ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಹತ್ಯೆ, ಬಳಿಕ ತಪ್ಪಿಸಿಕೊಳ್ಳಲು ದರ್ಶನ್ ಯತ್ನ: ತನಿಖಾಧಿಕಾರಿಗಳು
ಬೆಂಗಳೂರು: ನಟ ದರ್ಶನ್ ತೂಗುದೀಪ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಮತ್ತು ಕೊಲೆ ಬಳಿಕ ತಪ್ಪಿಸಿಕೊಳ್ಳಲು ಹಲವು ವ್ಯಕ್ತಿಗಳನ್ನು ಸಂಪರ್ಕಿಸಿದ್ದಾರೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ದರ್ಶನ್ ತನ್ನ ವಿರುದ್ಧದ ಕಾನೂನು ಕ್ರಮಗಳಿಂದ ಪಾರಾಗಲು, ಬಂಧನದಿಂದ ತಪ್ಪಿಸಿಕೊಳ್ಳಲು ಮತ್ತು ಸಾಕ್ಷ್ಯ ನಾಶಪಡಿಸಲು ಬೇಕಾಗುವ ಖರ್ಚು ವೆಚ್ಚವನ್ನು ಭರಿಸುವ ಉದ್ದೇಶದಿಂದ ಪ್ರಕರಣದ ತಮ್ಮ ಸ್ನೇಹಿತನಿಂದ 40 ಲಕ್ಷ ರೂ. ಪಡೆದುಕೊಂಡಿದ್ದಾರೆ. ಸದ್ಯ ಆ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಗುರುವಾರ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಎಸಿಎಂಎಂ) ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸಿದ ರಿಮಾಂಡ್ ಅರ್ಜಿಯಲ್ಲಿ ದರ್ಶನ್ ಮತ್ತು ಇತರ ಮೂವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯುವ ಬಗ್ಗೆ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕೋರಿದ್ದು, ಪೊಲೀಸರು ತನಿಖೆಯ ವಿವರವನ್ನು ಹಂಚಿಕೊಂಡಿದ್ದಾರೆ.
ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಇತರ 13 ಆರೋಪಿಗಳನ್ನು ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರೇಣುಕಾಸ್ವಾಮಿ ಎಂಬ ವ್ಯಕ್ತಿಯು ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ.