ಖ್ಯಾತಿ ಸಾಹಿತಿ, ನಾಡೋಜ ಕಮಲಾ ಹಂಪನ ನಿಧನ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಲೇಖಕಿ ಕಮಲಾ ಹಂಪನ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಡಾ ಕಮಲಾ ಹಂಪನಾ ಅವರಿಗೆ 89 ವರ್ಷವಾಗಿತ್ತು. ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ. ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ. ಆರತಿ ಮನೆಯಲ್ಲಿ ವಾಸವಿದ್ದರು. ಕಳೆದ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅವರ ದೇಹವನ್ನು ಲೀಲಾವತಿ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ. ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರಿಗೆ ಕರ್ನಾಟಕ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ: ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.

ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದ ಡಾ.ಕಮಲಾ ಅವರದ್ದು ಸರ್ವರಿಗೂ ಒಳಿತನ್ನು ಬಯಸಿದ ಜೀವ.

ಡಾ.ಹಂಪ ನಾಗರಾಜಯ್ಯ ಮತ್ತವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. 

  • ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
    ಬೆಂಗಳೂರು :ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದರು. ಡಾ.ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ.

ಪತಿ ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ ಸೇರಿದಂತೆ, ಬಂದು ಮಿತ್ರರು ಹಾಗೂ ಅಪಾರ ಸಾಹಿತ್ಯಾಭಿಮಾನಿಗಳಿಗೆ ಕಮಲ ಅವರ ನಿಧನದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!