ಬಡಗಬೆಟ್ಟು ಕ್ರೆಡಿಟ್ ಕೋ-ಆ.ಸೊಸೈಟಿ: 12 ಲಕ್ಷ ರೂ.ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ

ಉಡುಪಿ ಜಿಲ್ಲೆಯ 25 ಕನ್ನಡ ಮಾಧ್ಯಮ ಶಾಲೆಗಳಿಗೆ ವಿತರಣೆ

ಮಕ್ಕಳು ಪಠ್ಯದೊಂದಿಗೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಎಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಸುಮಾರು 12ಲಕ್ಷ ರೂ. ಮೌಲ್ಯದ ಜಿಲ್ಲೆಯ ಸುಮಾರು 25 ಕನ್ನಡ ಮಾಧ್ಯಮ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು.

ಉಡುಪಿ ಅಜ್ಜರಕಾಡು ಟೌನ್‌ಹಾಲ್‌ನಲ್ಲಿ ಶನಿವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ನೋಟ್ ಪುಸ್ತಕ ವಿತರಿಸಿ ಮಾತನಾಡಿದ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ ಅವರು, ಮಕ್ಕಳು ಪಠ್ಯದೊಂದಿಗೆ ಇತರೆ ಪುಸ್ತಕಗಳು, ದಿನಪತ್ರಿಕೆ ಗಳನ್ನು ಕೂಡ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ನಿರಂತರ ಕಲಿಕೆಯಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸರಕಾರಿ ಸೇವೆಯಲ್ಲಿ ಅಧಿಕಾರಿಗಳಾಗಬಹುದಾಗಿದೆ ಎಂದರು.
ಪ್ರತಿಭೆ ಇದ್ದರೆ ಪುರಸ್ಕಾರ, ಅಧಿಕಾರ ದೊರೆಯುವುದು ಪ್ರಜಾಪ್ರಭುತ್ವದ ಮೂಲಭೂತ ಲಕ್ಷಣ ಆಗಿದೆ. ಇಂದು ಅಪರಾಧಿಗಳಿಗೆ ಸಿಗುವ ಪ್ರಚಾರ, ಪ್ರತಿಭಾವಂತ ಸಾಧಕ ಮಕ್ಕಳಿಗೆ ಸಿಗುತ್ತಿಲ್ಲ. ಇದು ಇಂದಿನ ದುರಂತ ಎಂದು ಕಳವಳ ವ್ಯಕ್ತಪಡಿಸಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಉಪನಿರ್ದೇಶಕ ಗಣಪತಿ ಕೆ. ಮಾತನಾಡಿದರು.
ಈ ಸಂದರ್ಭದಲ್ಲಿ ಸುಮಾರು 12ಲಕ್ಷ ರೂ. ಮೌಲ್ಯದ ಜಿಲ್ಲೆಯ ಸುಮಾರು 25 ಕನ್ನಡ ಮಾಧ್ಯಮ ಶಾಲೆಗಳಿಗೆ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳು ಹಾಗೂ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಉಡುಪಿ ಎಂಜಿಎಂ ಕಾಲೇಜಿನ ನಿವೃತ್ತ ರಾಜಕೀಯ ಶಾಸ್ತ್ರ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ‘ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಸಂಘದ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್ ಉಪಸ್ಥಿತರಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ಶೇರಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಣಿಪಾಲ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!