ಚಿಕನ್, ಫಿಶ್ ಕಬಾಬ್‌ಗೂ ಕುತ್ತು: ಕೃತಕ ಬಣ್ಣ ಬಳಕೆಗೆ ಸರ್ಕಾರ ನಿಷೇಧ- ಉಲ್ಲಂಘಿಸಿದರೆ ಜೀವಾವಧಿ ಶಿಕ್ಷೆ
ಬೆಂಗಳೂರು: ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ಯಾನ್ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಆಹಾರ ಸುರಕ್ಷತೆ ವಿಚಾರದಲ್ಲಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.
ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. ಕಳಪೆ ಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟು ಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.