ಖಾಸಗಿ ಕಾಲೇಜಿನಲ್ಲಿ ರಾಜಕೀಯ ಭಾಷಣ: ಸಂಸದ ಶ್ರೀನಿವಾಸ್‌ ಪೂಜಾರಿ ವಿರುದ್ಧ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿಯ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ ರಾಜಕೀಯ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಇತರೆ ಆರೋಪಿಗಳ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರುಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್ ಹಾಗೂ ತ್ರಿಶಾ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್‌. ಗೋಪಾಲಕೃಷ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರ ಪರ ವಕೀಲರ ವಾದ ಆಲಿಸಿದ ಪೀಠವು ಅರ್ಜಿದಾರರ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು.  ಅಲ್ಲದೆ, ಪ್ರಕರಣದಲ್ಲಿ ದೂರುದಾರರಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾರ ವಿಚಕ್ಷಣಾ ಅಧಿಕಾರಿಯಾಗಿದ್ದ ವಿಶ್ವನಾಥ್ ಶೆಟ್ಟಿ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ, ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ಅವರು “ಪ್ರಕರಣ ಸಂಬಂಧ ಚುನಾವಣಾ ಸಂಚಾರ ವಿಚಕ್ಷಣಾ ಅಧಿಕಾರಿಯು ಅರ್ಜಿದಾರರ ವಿರುದ್ಧ ಭಾರತ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188 ಅಡಿ ದೂರು ದಾಖಲಿಸಿದ್ದಾರೆ. ಈ ವಿಚಾರವಾಗಿ ದೂರು ದಾಖಲಿಸುವ ಅಧಿಕಾರ ವ್ಯಾಪ್ತಿಯನ್ನು ವಿಚಕ್ಷಣಾ ಅಧಿಕಾರಿ ಹೊಂದಿಲ್ಲ. ದೂರು ದಾಖಲಿಸುವಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸ್ಪರ್ಧಿಸಿದ್ದ ಕೋಟಾ ಶ್ರೀನಿವಾಸ ಪೂಜಾರಿ, ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ 2024ರ ಮಾರ್ಚ್‌ 30 ರಂದು ಕಾರ್ಯಕ್ರಮ ನಡೆಸಿದ್ದರು. ಈ ವೇಳೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು.

ಇದರಿಂದ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿ, ರಾಜಕೀಯ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾರ ವಿಚಕ್ಷಣಾ ಅಧಿಕಾರಿಯು ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 2024ರ ಏಪ್ರಿಲ್‌ 4ರಂದು ಖಾಸಗಿ ದೂರು ದಾಖಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಬೇಕು ಎಂದು ಸ್ಥಳೀಯ ಠಾಣಾ ಪೊಲೀಸರಿಗೆ ನೀರ್ದೇಶಿಸಿತ್ತು. ಜೊತೆಗೆ, ಸಂಸದ ಕೋಟಾ ಶ್ರಿನಿವಾಸ ಪೂಜಾರಿ ಹಾಗೂ ಇತರೆ ಆರೋಪಿಗಳಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಇದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Leave a Reply

Your email address will not be published. Required fields are marked *

error: Content is protected !!